ಹೊಸದಿಗಂತ ವರದಿ, ಕಾಸರಗೋಡು:
ಅಂತಾರಾಜ್ಯ ಕೆಎಸ್ಆರ್ಟಿಸಿ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರ ವ್ಯವಸ್ಥೆ ಮಂಜೂರುಗೊಳಿಸದಿದ್ದರೆ ಬಿಜೆಪಿ ನೇತೃತ್ವದಲ್ಲಿ ಪ್ರಬಲ ಹೋರಾಟ ಆರಂಭಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ , ನ್ಯಾಯವಾದಿ ಕೆ.ಶ್ರೀಕಾಂತ್ ಎಚ್ಚರಿಸಿದ್ದಾರೆ.
ಕಾಸರಗೋಡು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳು ಮಾತ್ರ ಸಂಚಾರ ನಡೆಸುತ್ತಿವೆ. ಕಾಸರಗೋಡು ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಕಡಿಮೆಯಿರುವುದರಿಂದ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಮಂಗಳೂರನ್ನೇ ಆಶ್ರಯಿಸುತ್ತಿದ್ದಾರೆ. ಕೋವಿಡ್ ಹತೋಟಿಗೆ ಬಂದಿರುವುದರಿಂದ ತರಗತಿಗಳು ಆರಂಭಗೊಂಡಿವೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಪ್ರಯಾಣಿಸುವುದು ಭಾರೀ ದೊಡ್ಡ ಆರ್ಥಿಕ ಹೊರೆ ಎನಿಸುತ್ತದೆ. ವಿದ್ಯಾರ್ಥಿಗಳಿಗೆ ರಿಯಾಯಿತಿ ದರ ಮಂಜೂರುಗೊಳಿಸಲು ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಕೇರಳ ಮುಖ್ಯಮಂತ್ರಿಯವರಿಗೆ ಮನವಿಯನ್ನು ಸಲ್ಲಿಸಿದರೂ ಪರಿಹಾರ ಒದಗಿಸದಿದ್ದರೆ ಜನಪರ ಒಕ್ಕೂಟದೊಂದಿಗೆ ಹೋರಾಟ ನಡೆಸುವುದಾಗಿ ಕೆ.ಶ್ರೀಕಾಂತ್ ಮುನ್ಸೂಚನೆ ನೀಡಿದರು.