ವಾಷಿಂಗ್ಟನ್: ಸೋಮವಾರ ಭಾರತಕ್ಕೆ ಆಗಮಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರ ಜತೆ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಚರ್ಚಿಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.
ಪ್ರಜಾಪ್ರಭುತ್ವ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಸಾರ್ವಜನಿಕವಾಗಿ ಹಾಗೂ ಖಾಸಗಿಯಾಗಿ ಮಾತನಾಡಲಿದ್ದಾರೆ. ವಿಶೇಷವಾಗಿ ಧಾರ್ಮಿಕ ಸ್ವಾತಂತ್ರ್ಯದ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತದ ಪ್ರಜಾಪ್ರಭುತ್ವದ ಬಗ್ಗೆ ಅಪಾರ ಗೌರವವಿದೆ ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ಎತ್ತಿಹಿಡಿಯಲು ನಾವು ಭಾರತವನ್ನು ಪ್ರೋತ್ಸಾಹಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಸಿಎಎ ಮತ್ತು ಎನ್ಆರ್ಸಿ ಪ್ರಶ್ನೆಗೆ ಉತ್ತರಿಸಿರುವ ಅವರು, ಅಮೆರಿಕ ಅಧ್ಯಕ್ಷರು ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಯುವ ಸಭೆಗಳಲ್ಲಿ ಈ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಈಗ ಪ್ರಪಂಚವೇ ಭಾರತದತ್ತ ನೋಡುತ್ತಿದೆ. ಭಾರತ ಪ್ರಜಾಪ್ರಭುತ್ವದ ಸಂಪ್ರದಾಯ ಮುಂದುವರಿಸಲಿದೆಯೇ, ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ಹೊಂದಿರುವ ಗೌರವ ಮುಂದುವರಿಸಲಿದೆಯೇ ಎಂಬ ಕೂತುಹಲ ಹೊಂದಿದೆ ಎಂದು ಹೇಳಿದರು.