ಹುಬ್ಬಳ್ಳಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಸುಗಮವಾಗಿ ನಡೆಯಲಿ ಎಂದು ಗೋಕುಲ ರಸ್ತೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೇಶವ ಕುಂಜದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ವಿಶೇಷ ಪೂಜೆ, ಹೋಮ ಹವನ, ಭಜನೆ ದೀಪೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ರಾಮ ನಾಮ ಜಪ ಪ್ರಮುಖವಾಗಿತ್ತು.
ಕೇಶವ ಕುಂಜವನ್ನು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ರಂಗೋಲಿ, ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ಹಿರಿಯ ಪ್ರಚಾರಕರಾದ ಹರಿಭಾವು ವಜೆ, ಸು.ರಾಮಣ್ಣ ಸೇರಿದಂತೆ ಮತ್ತಿತರರು ಇದ್ದರು.
ವಿವಿಧೆಡೆ ಪೂಜೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ಹಿನ್ನೆಲೆ ನಗರದ ಹಲವೆಡೆ ಶ್ರೀರಾಮ ಮತ್ತು ಹನುಮಾನ ದೇವಾಲಯಗಳಲ್ಲಿ
ವಿಶೇಷ ಪೂಜೆ ಹಾಗೂ ಅಭಿಷೇಕ ನಡೆಯಿತು.
ಕೆಲವೆಡೆ ಭಕ್ತರು ಶ್ರೀರಾಮನ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು. ಪ್ರಮುಖ ರಸ್ತೆಗಳಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.
ನಗರದ ಪ್ರಮುಖ ದೇವಾಲಯಗಳಲ್ಲಿ ಭಕ್ತರಿಗೆ ಸಾಮಾಜಿಕ ಅಂತರದೊಂದಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.