ಹೊಸ ದಿಗಂತ ವರದಿ, ಮೈಸೂರು:
ಮೈಸೂರಿನಲ್ಲಿ ಅರ್ಧಕ್ಕೆ ನಿಂತಿರುವ ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ಬೇಕಾಗಿರುವ 16 ಕೋಟಿ ರೂಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಮಾಜಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು.
ಗುರುವಾರ ಮೈಸೂರಿನ ದೇವರಾಜ ಮೊಹಲ್ಲಾದಲ್ಲಿ ಹಣಕಾಸಿನ ಕೊರತೆಯಿಂದ ನೆನೆಗುದಿಗೆ ಬಿದ್ದಿರುವ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ, ಅಪೂರ್ಣಗೊಂಡಿರುವ ಭವನ ಕಟ್ಟಡವನ್ನು ಪರಿಶೀಲಿಸಿದರು. ಇದೇ ವೇಳೆ ಕಟ್ಟಡ ಪೂರ್ಣಗೊಳಿಸುವ ವಿಚಾರವಾಗಿ ಕೆಲಹೊತ್ತು ಸಂಸದ ಶ್ರೀನಿವಾಸ್ ಪ್ರಸಾದ್ ಜೊತೆ ಚರ್ಚೆ ನಡೆಸಿದರು. ಅಲ್ಲದೇ ಶಾಸಕ ಎಲ್.ನಾಗೇಂದ್ರ,ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಸಂಸದ ವಿ.ಶ್ರೀನಿವಾಸ್ ಪ್ರಸಾದ್ರೊಂದಿಗೆ ಭವನವನ್ನು ಪೂರ್ಣಗೊಳಿಸಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಭವನ ಕಾಮಗಾರಿ ಮುಕ್ತಾಯ ಗೊಳಿಸಲು ಸ್ಥಳಿಯ ಶಾಸಕರು, ಜಿಲ್ಲಾಮಂತ್ರಿಗಳು ೧೬ ಕೋಟಿ ಪ್ರಸ್ತಾಪ ಇಟ್ಟಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ೧೬ ಕೋಟಿ ಹಣ ಬಿಡುಗಡೆ ಮಾಡಿಸುತ್ತೇನೆ. ನಿಂತಿರೋ ಕೆಲಸ ಪೂರ್ಣಗೊಳಿಸಿ ಅದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ಕಟ್ಟಡ ಉದ್ಘಾಟನೆ ಮಾಡಿಸುವ ಕೆಲಸ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.