Sunday, August 14, 2022

Latest Posts

ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನು ಕ್ರಮ, ಜಾಗೃತಿಯೂ ಆಗಬೇಕಿದೆ: ಜಿಲ್ಲಾಧಿಕಾರಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಕಾನೂನು ಕ್ರಮಗಳನ್ನು ಜರುಗಿಸುವ ಜೊತೆ ಜೊತೆಗೆ ಸಮುದಾಯದಲ್ಲಿ ಜಾಗೃತಿಯನ್ನೂ ಮೂಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾಗೃತಿ ಸಮಿತಿಯ ಸದಸ್ಯ ಬಿ.ರಾಜಪ್ಪ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿದೆ. ಪರಿಶಿಷ್ಟರಿಗೆ ಹೋಟೆಲ್, ಕ್ಷೌರದಂಗಡಿ, ದೇವಸ್ಥಾನಗಳಲ್ಲಿ ಪ್ರವೇಶಕ್ಕೆ ತೊಂದರೆಯಿದೆ. ಕೆಲವೆಡೆ ಆಶಾ ಕಾರ್ಯಕರ್ತೆಯರೂ ಕೂಡ ಅಸ್ಪೃಶ್ಯತೆಯ ನೋವು ಅನುಭವಿಸುವ ಸ್ಥಿತಿ ಇದೆ. ಇದನ್ನು ನಿರ್ಮೂಲನೆ ಮಾಡಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.
ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಪ್ರತಿಕ್ರಿಯಿಸಿ, ಪರಿಶಿಷ್ಟರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿಯೇ ಸರ್ಕಾರ ಹಲವಾರು ಯೋಜನೆಗಳು, ಕಾನೂನುಗಳನ್ನು ರಚಿಸಿದೆ. ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಜಾಗೃತಿ ಸಭೆಗಳ ಮೂಲಕ ವೇದಿಕೆ ಕಲ್ಪಿಸಿಕೊಟ್ಟಿದೆ. ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಒಂದೆಡೆ ನಾವು ಕಾನೂನು ಕ್ರಮಗಳನ್ನು ಜರುಗಿಸುವ ಮೂಲಕ ಯತ್ನಿಸಿದರೆ, ಇನ್ನೊಂದೆಡೆ ಸಮುದಾಯದಲ್ಲಿ ಜಾಗೃತಿಯನ್ನೂ ಕೂಡ ಮೂಡಿಸುವ ಕೆಲಸ ಮಾಡಬೇಕಿದೆ ಎಂದರು.
ಈ ನಿಟ್ಟಿನಲ್ಲಿ ಕಳೆದ ವರ್ಷ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಚಾರಗೋಷ್ಠಿ ಹಾಗೂ ಕಾರ್ಯಗಾರಗಳನ್ನು ನಡೆಸಲಾಗಿದೆ. ಇದಕ್ಕಾಗಿ ಕಳೆದ ವರ್ಷ ಸಮಾಜ ಕಲ್ಯಾಣ ಇಲಾಖೆ ೦೪ ಲಕ್ಷ ರೂ. ವೆಚ್ಚ ಮಾಡಲಾಗಿದೆ. ಆದಾಗ್ಯೂ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ನಿರ್ದಿಷ್ಟ ದೂರು ಬಂದಲ್ಲಿ, ಪೊಲೀಸ್, ಕಂದಾಯ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆಗೆ ಜಾಗೃತಿ ಸಮಿತಿ ಸದಸ್ಯರನ್ನು ಒಳಗೊಂಡ ತಂಡ ರಚಿಸಿ, ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಮಿತಿ ಸದಸ್ಯ ಅರುಣ್‌ಕುಮಾರ್ ಮಾತನಾಡಿ, ನಾಯಕನಹಟ್ಟಿ ಪಟ್ಟಣದಲ್ಲಿ ಮುಂಡಾಳ ಮತ್ತು ದಾಸರ ಜನಾಂಗದವರು ಇನ್ನೂ ಗುಡಿಸಲುಗಳಲ್ಲಿ ವಾಸವಿದ್ದಾರೆ. ಒಂದೇ ಸ್ಥಳದಲ್ಲಿ ಎರಡೂ ಸಮುದಾಯದವರಿಗೆ ನಿವೇಶನದ ಹಕ್ಕುಪತ್ರ ನೀಡಲಾಗಿದೆ. ಇದರಿಂದ ವಿವಾದವಾಗಿದ್ದು, ಸಂಬಂಧಪಟ್ಟ ಫಲಾನುಭವಿಗಳಿಗೆ ನಿರ್ದಿಷ್ಟ ನಿವೇಶನ ಗುರುತಿಸಿ, ಹಕ್ಕುಪತ್ರ ಮರು ವಿತರಿಸಬೇಕು. ಅಲ್ಲದೇ ಜಿಲ್ಲೆಯ ಹಲವೆಡೆ ಸುಡುಗಾಡು ಸಿದ್ದರು, ದಾಸರು ಸೇರಿದಂತೆ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ನಿವೇಶನ ಒದಗಿಸಿ, ಅವರಿಗೆ ವಸತಿ ಸೌಕರ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ಪಟ್ಟಣ ಪಂಚಾಯತ್ ವತಿಯಿಂದ ನಿವೇಶನದ ಸ್ಥಳದಲ್ಲಿ ಲೇಔಟ್ ಮಾಡಿಸಿ, ಅಭಿವೃದ್ಧಿಪಡಿಸಿ, ನಿಗದಿತ ವ್ಯಕ್ತಿಗೆ ನಿಗದಿತ ನಿವೇಶನ ಗುರುತು ಮಾಡಿ, ಮರು ಹಂಚಿಕೆ ಮಾಡಲು ಕ್ರಮ ಜರುಗಿಸಲಾಗುವುದು. ಅಲೆಮಾರಿ ಮತ್ತು ಅರೆ ಅಲೆಮಾರಿ ವರ್ಗದವರಿಗೂ ಈಗಾಗಲೇ ನಿವೇಶನ ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ವಸತಿ ಸೌಲಭ್ಯ ಕಲ್ಪಿಸಲು ರಾಜೀವ್‌ಗಾಂಧಿ ವಸತಿ ನಿಗಮದಿಂದ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸದಸ್ಯ ಭಕ್ತ ಪ್ರಹ್ಲಾದ್ ಮಾತನಾಡಿ, ೧೯೯೪-೯೫ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡಿ, ಈಗ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಸ್ಕಾಲರ್‌ಶಿಪ್ ಪಡೆಯಲು ತಾಂತ್ರಿಕ ತೊಂದರೆ ಉಂಟಾಗಿದೆ. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವೇಳೆ ೯೪-೯೫ ನೇ ಸಾಲಿನ ಅಂಕಪಟ್ಟಿ ಅಪ್‌ಲೋಡ್ ಮಾಡಲು ತಾಂತ್ರಿಕ ಸಮಸ್ಯೆ ಇದೆ. ಹಾನಗಲ್ ಬಳಿ ಚಿರತೆ ಹಾವಳಿ ಇದ್ದು, ಪರಿಶಿಷ್ಟ ಜನಾಂಗ ಹೆಚ್ಚು ವಾಸಿಸುತ್ತಿರುವ ಪ್ರದೇಶದಲ್ಲಿ ಜನ ಆತಂಕದಲ್ಲಿ ಇದ್ದಾರೆ. ಚಿರತೆ ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳಮ್ಮ, ಕಳೆದ ಜನವರಿಯಿಂದ ಈವರೆಗೆ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ೨೦ ಪ್ರಕರಣಗಳು ದಾಖಲಾಗಿವೆ. ಕೊಲೆ, ಕೊಲೆ ಯತ್ನ, ಅತ್ಯಾಚಾರ ಹಾಗೂ ಯತ್ನ, ಜಾತಿನಿಂದನೆಯ ಒಟ್ಟು ೨೮ ಪ್ರಕರಣಗಳಿಗೆ ಸಂಬಂಧಿಸಿದಂತೆ ೧೭.೫೦ ಲಕ್ಷ ರೂ. ಪರಿಹಾರವನ್ನು ಸಂಬಂಧಪಟ್ಟ ಸಂತ್ರಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೪೩ ಪ್ರಕರಣಗಳು ಇನ್ನೂ ನ್ಯಾಯಾಲಯದಲ್ಲಿ ವಿಲೇವಾರಿಯಾಗುವುದು ಬಾಕಿ ಇದೆ ಎಂದು ವಿವರ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಉಪವಿಭಾಗಾಧಿಕಾರಿ ಪ್ರಸನ್ನ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ನಂದಗಾವಿ, ಡಿವೈಎಸ್‌ಪಿಗಳಾದ ಪಾಂಡುರಂಗ, ಶ್ರೀಧರ್ ಸೇರಿದಂತೆ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss