ಮೈಸೂರು: ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಬದುಕಲು ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣ ಓದುವುದು ಅಗತ್ಯ ಎಂದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಶನಿವಾರ ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದ ಬಳಿಕ
ಮಾತನಾಡಿದ ಅವರು, ಯುವಕರು ಮಹರ್ಷಿ ವಾಲ್ಮೀಕಿಯ ಬಗ್ಗೆ ತಿಳಿದುಕೊಳ್ಳಲು ಮುಂದಾಗಬೇಕು ಹಾಗೂ ವಾಲ್ಮೀಕಿ ಅವರು ರಚಿಸಿದ ಮಹಾಕಾವ್ಯ ರಾಮಾಯಣವನ್ನು ಓದಬೇಕು ಎಂದು ತಿಳಿಸಿದರು.
ರಾಮಾಯಣ ಓದುವುದರಿಂದ ಶ್ರೀ ರಾಮನ ರಾಮರಾಜ್ಯದ ಬಗ್ಗೆ ತಿಳಿದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ವ್ಯಕ್ತಿಯಾಗಿ ರೂಪಿಸಿಕೊಳ್ಳಬಹುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಎಂಬುವವರ ಹೆಸರಿನಲ್ಲಿ ಎಸ್. ಎಸ್.ಎಲ್.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿ ಅಶ್ವಿನಿ ಎಂಬುವವರಿಗೆ ಒಂದು ಲಕ್ಷ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಮಹಾನಗರ ಪಾಲಿಕೆಯ ಉಪಮೇಯರ್ ಸಿ.ಶೀಧರ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್ ಸೇರದಂತೆ ಇನ್ನಿತರರು ಉಪಸ್ಥಿತರಿದ್ದರು.