Friday, August 19, 2022

Latest Posts

ಆ.5ರಂದು ಶ್ರೀ ರಾಮ ಮಂದಿರ ನಿರ್ಮಾಣ ಪೂಜೆ, ಚಿತ್ರದುರ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಚಿತ್ರದುರ್ಗ: ಇದೇ ಆ.5 ರಂದು ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮ ಜರುಗುವ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ಕ್ರಮವಾಗಿ ಆ.5 ರಂದು ಬೆಳಿಗ್ಗೆ 5 ರಿಂದ ಮಧ್ಯರಾತ್ರಿ 12 ರವರೆಗೆ ಜಿಲ್ಲೆಯಾದ್ಯಂತ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತ ಎಸ್ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಪಾಲನೆ, ಸಾರ್ವಜನಿಕ ಶಾಂತಿ ಆಸ್ತಿ -ಪಾಸ್ತಿ ಕಾಪಾಡುವ ಹಿತ ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಕಲಂ 144 ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆಯನ್ವಯ, ಜಿಲ್ಲೆಯಾದ್ಯಂತ ಮೆರವಣಿಗೆ ಅಥವಾ ೦೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡುಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಮಾರಕಾಸ್ತ್ರಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳು, ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳನ್ನು ಎಸೆಯವ ಅಥವಾ ಬಿಡುವ ಸಾಧನಗಳನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ, ಪ್ರತಿಮೆಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಮಾಡುವುದು ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಸಾರ್ವಜನಿಕ ಸಭ್ಯತೆ, ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗಳಿಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಷಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದಲ್ಲಿ ಅವುಗಳನ್ನು ಕೂಡಲೆ ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂಥಹಾ ಮಾರಾಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
ರಾಷ್ಟ್ರ ವಿರೋಧಿ, ಕೋಮು ವಿರೋಧಿ, ಜಾತಿ ವಿರೋಧಿ ಘೋಷಣೆಗಳನ್ನು ಕೂಗುವುದು, ಕೋಮು ದ್ವೇಷ ಹೆಚ್ಚಿಸುವಂತಹ ಹಾಡುಗಳನ್ನು ಪ್ರಸಾರ ಮಾಡದಂತೆ ಹಾಗೂ ಕೋಮು ಭಾವನೆಗಳನ್ನು ಉದ್ರೇಕಿಸುವಂತಹ ಬರಹವನ್ನು ಒಳಗೊಂಡ ಕರಪತ್ರ, ಭಿತ್ತಿಪತ್ರ ಹಾಗೂ ಪ್ಲೆಕ್ಸ್, ಬ್ಯಾನರ್, ಬಾವುಟಗಳನ್ನು ಪ್ರದರ್ಶಿಸುವಂತಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತ ಎಸ್ ಮನ್ನಿಕೇರಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!