ಬೆಂಗಳೂರು: 78 ವಸಂತಕ್ಕೆ ಕಾಲಿಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅಧ್ಯಕ್ಷತೆಯಲ್ಲಿ ಅರಮನೆ ಮೈದಾನದಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಕೇಂದ್ರದ ರಕ್ಷಣಾ ಸಚಿವ ರಾಜನಾಥ್ಸಿಂಗ್ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ.
ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಫಿ ಟೇಬಲ್ ಪುಸ್ತಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾಕ್ಷ್ಯ ಚಿತ್ರ ಬಿಡುಗಡೆಗೊಳಿಸಲಿದ್ದಾರೆ. ಕವಿ ಡಾ.ಸಿದ್ದಲಿಂಗಯ್ಯ ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ, ಕೇಂದ್ರದ ರೈಲ್ವೇ ರಾಜ್ಯ ಸಚಿವ ಸುರೇಶ್ ಅಂಗಡಿ ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.