ಹೊಸದಿಗಂತ ವರದಿ,ಮೈಸೂರು:
ಕೋವಿಡ್ ಕಾರಣದಿಂದ ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ಕಡಿಮೆಯಾಗಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶನಿವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ 2.37 ಲಕ್ಷ ಕೋಟಿ ರೂ. ಬಜೆಟ್ ಮಾಡಿಸಲಾಗಿತ್ತು. ಆದರೆ ಕೋವಿಡ್ ಕಾರಣದಿಂದ ಸಂಪನ್ಮೂಲದ ಕೊರತೆಯಾಗಿದೆ. ಇದರಿಂದಾಗಿ ಹಣಕಾಸು ಬಿಕ್ಕಟ್ಟು ಉಂಟಾಗಿರುವ ಕಾರಣ ಅನಿವಾರ್ಯವಾಗಿ ಬಜೆಟ್ ಗಾತ್ರವನ್ನು ಕಡಿಮೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕೋವಿಡ್ ಸೋಂಕು ಶೇ. 90 ರಷ್ಟು ಇಳಿಕೆಯಾಗಿದೆ. ಕೋವಿಡ್ ನಿಯಂತ್ರಣಕ್ಕೆ ನೀಡುತ್ತಿರುವ ಅನುದಾನವನ್ನು ಮುಂದುವರೆಸಲಾಗುವುದು ಎಂದು ಹೇಳಿದರು.
ಶಿವಮೊಗ್ಗದಲ್ಲಿ ನಡೆದ ಗಣಿ ಸ್ಫೋಟದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುವುದು. ಸ್ಪೋಟದ ತೀವ್ರತೆಯಿಂದ ಹಲವು ಮನೆಗಳಿಗೆ ಹಾನಿಯಾಗಿದೆ. ಅಂತಹ ಮನೆಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು. ಇಂದು ಮಧ್ಯಾಹ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದರು.
ಗಣಿಗಾರಿಕೆ ನಡೆಯುವುದು ಅನಿವಾರ್ಯ, ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ಆದರೆ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೆ ಗಂಭೀರ ಪರಿಣಾಮ ವನ್ನು ಎದುರಿಸಬೇಕಾಗುತ್ತದೆ. ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಅಂತಹ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ.
ಯಾರಾದರೂ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೆ, ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಸಕ್ರಮ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ವೇಳೆ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ವಿವಿಧ ನಿಗಮ ಮಂಡಳಿಯ ಅಧ್ಯಕ್ಷ ರಾದ ಎಸ್.ಮಹದೇವಯ್ಯ, ಎನ್.ವಿ.ಫಣೀಶ್, ಕೌಟಿಲ್ಯ ಆರ್.ರಘು ಮತ್ತಿತರರು ಇದ್ದರು