Monday, July 4, 2022

Latest Posts

ಉಡುಪಿಯ ತ್ರಾಸಿ ಜಂಕ್ಷನ್‌ನಲ್ಲಿ ಹೆಚ್ಚುತ್ತಿರುವ ಅಪಘಾತಗಳು: ಹೆದ್ದಾರಿಯ ಅವ್ಯವಸ್ಥೆಗೆ ವಾಹನ ಚಾಲಕರ ಆಕ್ರೋಶ

ಹೊಸದಿಗಂತ ವರದಿ, ಉಡುಪಿ:

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಜಂಕ್ಷನ್‌ನಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಹೆದ್ದಾರಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಸ್ಥಳೀಯರು ಹಾಗೂ ವಾಹನ ಚಾಲಕರು ಶನಿವಾರ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು.
ಶನಿವಾರ ಮಧ್ಯಾಹ್ನ ನಡೆದ ಅಪಘಾತದಿಂದ ರೊಚ್ಚಿಗೆದ್ದ ಸ್ಥಳೀಯರು ಹಾಗೂ ರಿಕ್ಷಾ ಚಾಲಕರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಹೆದ್ದಾರಿ ತಡೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತ್ರಾಸಿ ಜಂಕ್ಷನ್‌ನಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಇಲಾಖೆಯಾಗಲೀ ಸ್ಥಳೀಯ ಜನಪ್ರತಿಧಿಗಳು ಯಾವುದೇ ಕ್ರಮಕೈಗೊಳ್ಳದೆ ಜನರ ಜೀವದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಇವರ ನಿರ್ಲಕ್ಷದಿಂದಲೇ ಅಪಘಾತಗಳು ಹೆಚ್ಚುತ್ತಿದ್ದು ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ತ್ರಾಸಿ ಜಂಕ್ಷನ್‌ನಲ್ಲಿ ಅಸಮರ್ಪಕ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಅಪಘಾತಗಳು ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇಲ್ಲಿನ ಅವ್ಯವಸ್ಥೆ ಬಗ್ಗೆ ಸಂಸದರು, ಶಾಸಕರು ಹಾಗೂ ಐಆರ್‌ಬಿ ಕಂಪನಿಯ ಅಧಿಕಾರಿಗಳ ಗಮನ ಸೆಳೆದು ಆದಷ್ಟು ಶೀಘ್ರ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸಿ ಪಾದಚಾರಿಗಳಿಗೆ, ವಾಹನ ಸವಾರರಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದ್ದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ತ್ರಾಸಿ ಜಂಕ್ಷನ್ ಅಪಘಾತ ವಲಯವಾಗಿ ಮಾರ್ಪಡುತ್ತಿದೆ. ಹೀಗಾಗಿ ಸಂಬಂಧಪಟ್ಟ ಗುತ್ತಿಗೆದಾರ ಕಂಪೆನಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಪೂರ್ಣಗೊಂಡಿರುವ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ನೀಡುವ ತನಕ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಹೆದ್ದಾರಿ ತಡೆ ಮುಂದುವರಿಸಿದರು.
ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್‌ಐ ಭೀಮಾಶಂಕರ ಎಸ್. ಪ್ರತಿಭಟನಾಕಾರರ ಮನವೊಲಿಸಿ ರಸ್ತೆ ತಡೆಯನ್ನು ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು. ಇದೇ ಸಂದರ್ಭ ಸ್ಥಳಕ್ಕೆ ಆಗಮಿಸಿದ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಪ್ರತಿಭಟನಾನಿರತರ ಜೊತೆ ಮಾತುಕತೆ ನಡೆಸಿ ಹೆದ್ದಾರಿ ತಡೆ ನಡೆಸದಂತೆ ಹಾಗೂ ಆದಷ್ಟು ಶೀಘ್ರ ಗುತ್ತಿಗೆದಾರ ಕಂಪೆನಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss