ಉಡುಪಿ: ಉಡುಪಿ ನಗರದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳು ಹಾಗೂ ಇತರ ಯೋಜನೆಗಳ ಪ್ರಗತಿಯ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳನ್ನೊಳಗೊಂಡ ಸಭೆ ಬೆಂಗಳೂರಿನ ವಿಧಾನಸೌಧದ ನಗರಾಭಿವೃದ್ಧಿ ಸಚಿವರ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಪಾಲ್ಗೊಂಡ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಉಡುಪಿ ನಗರದ ವ್ಯಾಪ್ತಿಯಲ್ಲಿ 10 ಸೆಂಟ್ಸ್ ಕೃಷಿ ಭೂಮಿಯನ್ನು ವಸತಿ ನಿರ್ಮಾಣಕ್ಕೆ ವಲಯ ಬದಲಾವಣೆಗೆ ಅವಕಾಶ ಕಲ್ಪಿಸುವುದು, ನಗರದಲ್ಲಿ ಹಾಲಿ ಇರುವ ಒಳಚರಂಡಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು, ವಾರಾಹಿ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಶಾಸಕ ಕೆ. ರಘುಪತಿ ಭಟ್ ರವರು ಪ್ರಸ್ತಾಪಿಸಿದ ವಿಷಯಗಳ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ರವಿಶಂಕರ್ ಪ್ರಸಾದ್ ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಚಾರುಲತಾ, ನಗರ ಯೋಜನೆ ಇಲಾಖೆ ನಿರ್ದೇಶಕ ಶಶಿಕುಮಾರ್ ಹಾಗೂ ಇತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಕಾಮಗಾರಿಗಳು, ಯೋಜನೆಗಳ ಪ್ರಗತಿ ಕುರಿತು ಸಭೆ
- Advertisement -