Thursday, August 11, 2022

Latest Posts

ಉಡುಪಿ ಜಿಲ್ಲಾಸ್ಪತ್ರೆಗೆ ಮೇಲ್ದರ್ಜೆ ಭಾಗ್ಯ: ಶೀಘ್ರದಲ್ಲಿ 300 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಪರಿವರ್ತನೆ: ಸಚಿವ ಬೊಮ್ಮಾಯಿ

ಉಡುಪಿ: ಜಿಲ್ಲಾ ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ಮೇಲ್ದರ್ಜೆಗೇರಿಸಿ 300 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಡಳಿತಕ್ಕೆ ವೆಂಟಿಲೇಟರ್ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ವೆಂಟಿಲೇಟರ್‌ಗಳನ್ನು ಸ್ವೀಕರಿಸಿ ಮಾತನಾಡಿದರು.
ಉಡುಪಿಯ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗಳು ಅನುಮೋದನೆಯನ್ನು ನೀಡಿದ್ದಾರೆ. ಇದಕ್ಕೆ ಹಣಕಾಸು ಇಲಾಖೆಯಿಂದ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಯಾಗಲಿದ್ದು, ಮೇಲ್ದರ್ಜೆಗೇರಿಸಿ ಶೀಘ್ರದಲ್ಲಿ ಕಾರ್ಯ ಪ್ರಾರಂಭವಾಗಲಿದೆ ಎಂದರು.
ಕೊರೋನಾ ಸೋಂಕು ಹೊಂದಿ ಉಸಿರಾಟದ ಸಮಸ್ಯೆ ಇರುವ ರೋಗಿಗಳಿಗೆ ಚಿಕಿತ್ಸೆ ನೀಡಿ ಅನುಕೂಲ ಮಾಡಿ ಕೊಡುವ ಉದ್ದೇಶದಿಂದ ಸರಕಾರವು 20 ಹಾಗೂ ದಾನಿಗಳಿಂದ 10 ವೆಂಟಿಲೇಟರ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಇವುಗಳ ಬಳಕೆ ಮಾಡಿ ಚಿಕಿತ್ಸೆ ನೀಡುವುದರಿಂದ ಮರಣವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಸಚಿವರು ತಿಳಿಸಿದರು.
ಶಾಸಕ ರಘುಪತಿ ಭಟ್ ಅವರು ಲಾಕ್‌ಡೌನ್ ಸಂದರ್ಭದಲ್ಲಿ ಜನರಿಗೆ 100ಕ್ಕೂ ಹೆಚ್ಚು ದಿನಗಳ ಕಾಲ ಆಹಾರ ಪದಾರ್ಥಗಳನ್ನು ಹಂಚಿಕೆ ಮಾಡಿದ್ದಾರೆ. ಅಲ್ಲದೇ ದಾನಿಗಳನ್ನು ಸಂಪರ್ಕಿಸಿ 10ಕ್ಕೂ ಹೆಚ್ಚು ವೆಂಟಿಲೇಟರ್‌ಗಳನ್ನು ದಾನವಾಗಿ ಪಡೆಯುವುದರೊಂದಿಗೆ ಸರಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆಂದು ಶಾಸಕರನ್ನು ಸಚಿವರು ಶ್ಲಾಘಿಸಿದರು.
ಸರಕಾರವು ಎಲ್ಲಾ ರೀತಿಯಲ್ಲಿಯೂ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಪ್ರಯತ್ನ ನಡೆಸುತ್ತಲೇ ಇದೆ. ಇಂದು ನೀಡಿದ ವೆಂಟಿಲೇಟರ್‌ಗಳನ್ನು ಸರಕಾರ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಬಳಕೆ ಮಾಡಿಕೊಳ್ಳಲಾಗುವುದು ಎಂದ ಸಚಿವರು, ಕೊರೋನಾ ಸವಾಲಿನ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಕ್ಕೆ ವೆಂಟಿಲೇಟರ್‌ಗಳನ್ನು ದಾನವಾಗಿ ನೀಡಿದ ಜಿ. ಶಂಕರ್, ಆಭರಣ ಜ್ಯುವೆಲ್ಲರ್ಸ್‌, ರೋಬೋ ಸ್ಟಾವೇರ್ ಟೆಕ್ನಾಲಜಿ ಹಾಗೂ ಹೆಗ್ಗುಂಜೆ ರಾಜೀವ್ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಎಚ್.ಎನ್ ಶೆಟ್ಟಿ ಅವರಿಗೆ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ. ಜಗದೀಶ, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮತ್ತಿತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss