ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ (ಎಫ್ ಡಿಎ) ಗಳನ್ನು ಕರ್ನಾಟಕ ಲೋಕಸೇವಾ ಆಯೋಗ ದಿಢೀರ್ ಮುಂದೂಡಿದೆ.
ಪರೀಕ್ಷೆಯ ಪ್ರಶ್ನೆಪತ್ರಿಕೆಯು ಸೋರಿಕೆಯಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಜ. 23ರ ಶನಿವಾರ ಕಡ್ಡಾಯ ಕನ್ನಡ ಭಾಷೆಯ ಪರೀಕ್ಷೆ ಮತ್ತು ಜ.24ರಂದು (ಭಾನುವಾರ) ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿತ್ತು.
ಆದರೆ ಭಾನುವಾರ ನಡೆಯಬೇಕಿದ್ದ ಎರಡು ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಶನಿವಾರವೇ ಕೆಲವು ದುಷ್ಕರ್ಮಿಗಳ ಕೈಗೆ ದೊರಕಿರುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ.
ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿ ಘೋಷಣೆ ಮಾಡುತ್ತೇವೆ ಎಂದೂ ಸತ್ಯವತಿ ಅವರು ಮಾಹಿತಿ ನೀಡಿದ್ದಾರೆ.