ಹೊಸ ದಿಗಂತ ವರದಿ, ಮಂಗಳೂರು:
ಗ್ರಾಪಂ ಚುನಾವಣೆ ಮತ ಎಣಿಕೆ ವೇಳೆ ಉಜಿರೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ದೇಶವಿರೋಧಿ ಘೋಷಣೆ ಕೂಗಿರುವುದನ್ನು ಖಂಡಿಸಿ, ಎಸ್ಡಿಪಿಐ ನಿಷೇಧಕ್ಕೆ ಒತ್ತಾಯಿಸಿ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ವತಿಯಿಂದ ನಗರದ ತಾಪಂ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಯಿತು.
ಎಸ್ಡಿಪಿಐ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಸದಾ ದೇಶದ್ರೋಹಿ ಕೃತ್ಯ ಎಸಗುತ್ತಿರುವ ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್, ಎಸ್ಡಿಪಿಐ ಸದಾ ರಾಷ್ಟ್ರವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ದೇಶದ್ರೋಹಿ ಪಕ್ಷವಾಗಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿರುವ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ
ದಾಖಲಿಸಿ ಕಠಿನ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.
ವಿಶ್ವಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೂರಜ್ ಜೈನ್ ಮಾರ್ನಾಡ್, ಸುದರ್ಶನ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಪ್ರಮುಖರಾದ ಭಾಸ್ಕರಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೂಪಾ ಭಾಗವಹಿಸಿದ್ದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.