ರಾಮನಗರ: ಜಿಲ್ಲೆಯಲ್ಲಿ ಐ.ಎಲ್.ಐ ಹಾಗೂ ಎಸ್.ಎ.ಆರ್.ಐನ ಹೆಚ್ಚು ಹೆಚ್ಚು ಪ್ರಕರಣಗಳನ್ನು ಪತ್ತೆ ಹಚ್ಚಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಇದರಿಂದ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಿ ಜಿಲ್ಲೆಯ ಜನರ ಜೀವವನ್ನು ಉಳಿಸುವಂತಹ ಮಹಾನ್ ಕೆಲಸದಲ್ಲಿ ತಾವುಗಳು ಭಾಗಿಯಾಗುವಂತೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಜಿಲ್ಲಾಡಳಿತಕ್ಕೆ ಸೂಚನೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಿದ ಕೋವಿಡ್-೧೯ಗೆ ಸಂಬoಧಿಸಿದ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೂ ೨೦೦೦ ಥರ್ಮಲ್ ಸ್ಕ್ಯಾನರ್ ಹಾಗೂ ಪಲ್ಸ್ ಆಕ್ಸಿಮೀಟರ್ ಉಪಕರಣಗಳನ್ನು ನೀಡಲಾಗಿದೆ. ಇದನ್ನು ಮನೆ-ಮನೆ ಪರೀಕ್ಷೆಗೆ ಬಳಸಿಕೊಳ್ಳಿ ಪಲ್ಸ್ ಆಕ್ಸಿ ಮೀಟರ್ಗಳಿಗೆ ಇನ್ನೂ ಹೆಚ್ಚಿನ ಬೇಡಿಕೆಸಲ್ಲಿಸಿ ಪಡೆದುಕೊಳ್ಳಿ ಅವುಗಳನ್ನು ಆಸ್ಪತ್ರೆಗಳಲ್ಲಿ ಬಳಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದರು.
ತಾಲ್ಲೂಕು ಆಸ್ಪತ್ರೆಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಲಭ್ಯತೆ, ಸ್ಟ್ಯಾಬ್ ಗಳ ಪರೀಕ್ಷೆಗೆ ಸಂಬoಧಿಸಿದoತೆ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯ ಫಲಿತಾಂಶಗಳನ್ನು ಶೀಘ್ರವಾಗಿ ತಲುಪುವಂತೆ ಮಾಡಬೇಕು. ಉಳಿದಿರುವ ಬ್ಯಾಕ್ಲಾಗ್ ವರದಿಯನ್ನು ಒಂದೆರಡು ದಿನಗಳಲ್ಲಿ ನೀಡುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್-೧೯ ಪರೀಕ್ಷೆಯ ವರದಿಯನ್ನು ಅಪ್ಲೋಡ್ ಮಾಡಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆ ಇದ್ದು ಇವುಗಳ ಪೈಪ್ಲೈನ್ ಕೆಲಸ ನಡೆಯಲು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಭೇಟಿ:
ಸಚಿವರು ಜಿಲ್ಲಾ ಪಂಚಾಯ್ತಿ ಭವನದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾಸ್ಪತ್ರೆಯ ಕಟ್ಟಡಕ್ಕೆ ದಿಡೀರ್ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ಕೆಲವು ಸೂಚನೆಯನ್ನು ನೀಡಿದ್ದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.