ಬೀದರ: ಔರಾದ-ಬೀದರ ರಸ್ತೆ ಮತ್ತು ಕೌಠಾ ಸೇತುವೆ ದುರಸ್ತಿಗಾಗಿ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ
ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.
ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ರಸ್ತೆಯ ದುರಸ್ತಿಗೆ ತಕ್ಷಣ ಕ್ರಮ ಜರುಗಿಸುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ನಾನು ಮತ್ತು ಸಂಸದರಾದ ಭಗವಂತ ಖೂಬಾ ಅವರು ಹಲವು ಬಾರಿ ಮನವಿ ಸಲ್ಲಿಸಿದ್ದೆವು. ಪ್ರಯುಕ್ತ ಔರಾದ-ಬೀದರ ರಸ್ತೆ ರಿಪೇರಿಗೆ 77 ಲಕ್ಷ ಮತ್ತು ಕೌಠಾ ಸೇತುವೆ ದುರಸ್ತಿಗೆ 1.33 ಕೋಟಿ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. ಸಂಬಂಧಪಟ್ಟ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರ ಸಭೆಗಳನ್ನು ನಡೆಸಿ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಕೆಲವು ದಿನಗಳಿಂದ ಸಾಕಷ್ಟು ಹಾಳಾಗಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದ್ದವು. ಇಷ್ಟು ದಿನ ಜನರಿಗೆ ತೀವ್ರ ತೊಂದರೆಯಾಗಿದ್ದಕ್ಕೆ ಸಚಿವರು ವಿಷಾದ ವ್ಯಕ್ತಪಡಿಸಿದ್ದಾರೆ.
ಔರಾದ-ಬೀದರ ರಸ್ತೆಯು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಪ್ರಕರಣವು ನ್ಯಾಯಾಲಯದಲ್ಲಿರುವುದರಿಂದ ವಿಳಂಬವಾಗುತ್ತಿದೆ. ಈ ಸಮಸ್ಯೆಯೂ ಸಹ ಶೀಘ್ರ ಇತ್ಯರ್ಥವಾಗುವ ನಿರೀಕ್ಷೆಯಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಹ ಬೇಗ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಸ್ತೆ ಮತ್ತು ಸೇತುವೆ ದುರಸ್ತಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿರುವ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಚಿವರು ಮತ್ತು ಸಂಸದರಾದ ಭಗವಂತ ಖೂಬಾ ಅವರು ಧನ್ಯವಾದ ಅರ್ಪಿಸಿದ್ದಾರೆ.