ಮೈಸೂರು: ಕೋವಿಡ್-೧೯ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಕುಂಠಿತವಾಗಿರುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳನ್ನು ಕೂಡಲೇ ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಸಿಲ್ದಾರ್ಗಳೊಂದಿಗೆ ವಿಡಿಯೋಕಾನ್ಫೆರೇನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಕಂದಾಯ ವಿಭಾಗದಲ್ಲಿ ರಾಜ್ಯದಲ್ಲೇ ಅತ್ಯುತ್ತಮ ಸ್ಥಾನವನ್ನು ಪಡೆಯುವಂತೆ ಅಧಿಕಾರಿಗಳು ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಇಲಾಖೆಗೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳು ವಿಳಂಬವಾಗುತ್ತಿದ್ದು, ಕೂಡಲೇ ಹಳೆಯ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.
ಹುಣಸೂರು ಮತ್ತು ಟಿ.ನರಸೀಪುರ ತಾಲ್ಲೂಕಿನಲ್ಲಿ ಖಾತೆ ಬದಾಲಾವಣೆ ಮಾಡುವಾಗ ವಿನಾಕಾರಣ ವಿಳಂಬವಾಗುತ್ತಿದ್ದು, ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರ್ಕಾರಿ ಒತ್ತುವರಿ ಭೂಮಿಯನ್ನು ವಿವರವಾಗಿ ಪರಿಶೀಲಿಸಿದ ಅವರು, ಮುಂದಿನ ವಾರದೊಳಗೆ ವರದಿ ಸಲ್ಲಿಸಬೇಕು.ಆರ್ಟಿಸಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿನ ಬೆಳೆ ಸಮೀಕ್ಷೆ, ಪೋಡಿ ಮುಕ್ತ ಅಭಿಯಾನದ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸುವಂತೆ ತಿಳಿಸಿದರು.