Sunday, August 14, 2022

Latest Posts

ಕಲ್ಯಾಣ ಅತಿವೃಷ್ಟಿ: ತುರ್ತು ಪರಿಹಾರ ಕ್ರಮ ಜರುಗಿಸಲು ಸಚಿವ ಪ್ರಭು ಚವ್ಹಾಣ್ ಸೂಚನೆ

ಯಾದಗಿರಿ : ಅತಿವೃಷ್ಟಿಯಿಂದಾಗಿ ಜಿಲ್ಲೆಯ ವಿವಿಧೆಡೆ ಬೆಳೆ ಹಾನಿ, ಪ್ರಾಣ ಹಾನಿ, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಸಾಕಷ್ಟು ಹಾನಿಯಾಗಿರುವ ಬಗ್ಗೆ ವರದಿಯಾಗಿದ್ದು, ಕೂಡಲೇ ಪರಿಶೀಲಿಸಿ ತುರ್ತು ಪರಿಹಾರ ಕ್ರಮಗಳನ್ನು ಜರುಗಿಸಬೇಕು ಎಂದು ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು.ಬಿ ಚವ್ಹಾಣ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಹೋಮ್ ಕ್ವಾರಂಟೈನ್‍ನಲ್ಲಿರುವ ಸಚಿವರು, ಮಳೆಯಿಂದಾದ ಹಾನಿಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ವಿವರಣೆ ಪಡೆದರು. ಆಯಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ವಿಷಯಕ್ಕನುಗುಣ ತುರ್ತಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು. ಹಾನಿ ಕುರಿತ ಸಮೀಕ್ಷಾ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನದಿ ತೀರದ ಪ್ರದೇಶಗಳು ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರವು ಈಗಾಗಲೇ ಅತೀವೃಷ್ಟಿಯಾದ ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೆಲವು ಕಡೆಗಳಲ್ಲಿ ಸೇತುವೆಗಳು ಮುಳುಗಿದ್ದು, ರಸ್ತೆಗಳು ಹಾಳಾಗಿರುವ ಬಗ್ಗೆ ದೂರುಗಳು ಬರುತ್ತಿವೆ. ಇಂತಹ ರಸ್ತೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಕ್ರಮ ವಹಿಸಬೇಕು. ಓಡಾಡಲು ಸಾಧ್ಯವಾಗದಂತಹ ರಸ್ತೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಇನ್ನಿತರೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಕೆಲವೆಡೆ ಕೆರೆಗಳು ಒಡೆದು ಮಳೆ ನೀರು ಮನೆಗಳು ಮತ್ತು ಕೃಷಿ ಭೂಮಿಗೆ ನುಗ್ಗಿ ಹಾನಿಯಾಗಿರುವ ಬಗ್ಗೆ ದೂರುಗಳು ಬಂದಿವೆ. ಈ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ.
ಜಿಲ್ಲೆಯ ಹಲವು ಗ್ರಾಮಗಳಲ್ಲಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಉರುಳಿ ಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕೆಲವೆಡೆ ಹಾನಿಯಾಗಿರುವ ಬಗ್ಗೆ ವರದಿಗಳು ಬಂದಿವೆ. ಉರುಳಿ ಬಿದ್ದ ಕಂಬಗಳನ್ನು ಸರಿಪಡಿಸಿ, ಯಾವುದೇ ಭಾಗದಲ್ಲಿ ವಿದ್ಯುತ್ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಳೆಯಿಂದ ಮನುಷ್ಯರಲ್ಲದೇ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿರುತ್ತವೆ. ಜಾನುವಾರುಗಳಿಗೆ ಹಾನಿ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss