ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಷ್ಡ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೆ ಹೈದರಬಾದ್-ಕರ್ನಾಟಕ ಪ್ರದೇಶವನ್ನು “ಕಲ್ಯಾಣ ಕರ್ನಾಟಕ” ಎಂದು ಮರು ನಾಮಕರಣ ಮಾಡಿ ಇಲ್ಲಿನ ಬಹುಜನರ ಒತ್ತಾಸೆಯನ್ನು ಈಡೇರಿಸಲಾಗಿದೆ. ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಸ್ಥಾಪನೆಗೊಂಡಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘವು ನಿಗದಿತ ಗುರಿ ಮುಟ್ಟುವಲ್ಲಿ ಸರ್ವರ ಸಹಕಾರದೊಂದಿಗೆ ಸಂಪೂರ್ಣ ಯಶಸ್ವಿಯಾಗುತ್ತದೆ ಎಂದು ನಾನು ನಂಬಿದ್ದೇನೆ ಎಂದರು.
ಕಲ್ಯಾಣ ಕರ್ನಾಟಕ ಪ್ರಾಂತ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಗಳಲ್ಲಿ ಒಂದಾಗಿದೆ. ಈ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮಂಡಳಿ ಮತ್ತು ಸಂಘವು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತೋಷದ ವಿಚಾರ. ಕೃಷಿ, ಆರೋಗ್ಯ, ಶಿಕ್ಷಣ, ಸ್ವಯಂ ಉದ್ಯೋಗ, ಗ್ರಾಮ ಸಬಲೀಕರಣ, ಯುವ ಜನ ಹಾಗೂ ಮಹಿಳಾ ಸಬಲೀಕರಣ ಮತ್ತು ನೈತಿಕ ತತ್ವಗಳನ್ನು ಸಾಧಿಸಿ, ಕಲ್ಯಾಣ ಕರ್ನಾಟಕದ ಜನರ ಬದುಕಿನಲ್ಲಿ ಹೊಸ ಅಧ್ಯಾಯೊಂದನ್ನು ತೆರೆಯಕು ಸ್ಥಾಪಿಸಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘಕ್ಕೆ 300 ಕೋ.ರೂ. ಮೊತ್ತ ಬಿಡುಗಡೆಗೆ ಅನುಮೋದನೆ ನೀಡಿ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದರು.
ಮೂರು ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕಲಬುರಗಿ, ಬೀದರ ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆಯ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು. ಇದರಿಂದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರಿನ ಪೂರೈಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿ ಎಂದರು.