ಬಳ್ಳಾರಿ: ಜಿಲ್ಲೆಯ ಕೂಡ್ಲಗಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಹೊಸದಿಗಂತ ವರದಿಗಾರ ತ್ರಿಮೂರ್ತಿ(39) ಅವರು ಸೋಮವಾರ ನಿಧನರಾದರು. ಮೃತರಿಗೆ ಒಬ್ಬ ಪುತ್ರಿ, ಒಬ್ಬ ಪುತ್ರ, ಪತ್ನಿ ಇದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅನಾರೋಗ್ಯ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ನಿಧನರಾದರು.
ಸರಳ ಸಜ್ಜನಿಕೆಗೆ ಹೆಸರಾಗಿದ್ದ ಅವರು, ಕಳೆದ ಕೂಡ್ಲಗಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿ ಗಮನಸೆಳೆದಿದ್ದರು. ಹೊಸದಿಗಂತ ತಾಲೂಕು ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ತಂಡೋಪ ತಂಡವಾಗಿ ಜನರು, ಅಭಿಮಾನಿಗಳು ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.
ಪ.ಪಂ.ಮುಖ್ಯಾಧಿಕಾರಿ ಫಕರುದ್ದೀನ್, ಅಧಿಕಾರಿ ವರ್ಗದವರು, ಪ.ಪಂ. ಎಲ್ಲ ಸದಸ್ಯರು, ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು, ಜಿಲ್ಲೆಯ ಪತ್ರಕರ್ತ ಮಿತ್ರರು, ಅಪಾರ ಬಂಧುಗಳು ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಮೃತರ ಅಂತ್ಯಕ್ರಿಯೆ ಸೋಮವಾರ ನಡೆಯಿತು.