ಹೊಸದಿಗಂತ ವರದಿ, ಕೊಡಗು:
ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಪರವಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್ ತಿಳಿಸಿದ್ದಾರೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹೋರಾಟವನ್ನು ಹಮ್ಮಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದೆ ಎಂದರು.
ರೈತರಿಗೆ ಮಾರಕವಾಗಬಲ್ಲ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವವರೆಗೆ ಪ್ರತಿಭಟನೆಗಳು ಮುಂದುವರೆಯಲಿವೆ. ಅಲ್ಲದೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸುವುದಾಗಿ ಹೇಳಿದರು.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೊಡಗು ಜಿಲ್ಲೆಯ ಮೂರು ತಾಲೂಕುಗಳ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು ಎಂದು ತಿಳಿಸಿದ ಸುರಯ್ಯ ಅಬ್ರಾರ್, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭ ಕಾಂಗ್ರೆಸ್ನ ಹಿರಿಯ ಮುಖಂಡ ಹೆಚ್.ಎಸ್.ಚಂದ್ರಮೌಳಿ, ಸೇವಾದಳದ ಅಧ್ಯಕ್ಷೆ ಪ್ರೇಮಾಕೃಷ್ಣಪ್ಪ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಗಡ ಪಾರ್ವತಿ ಫ್ಯಾನ್ಸಿ, ಪ್ರಧಾನ ಕಾರ್ಯದರ್ಶಿ ಕರ್ತಮಾಡ ರಮ್ಯಾ, ಬ್ಲಾಕ್ ಅಧ್ಯಕ್ಷೆ ಕೋಳೆರ ಭಾರತಿ, ಕಾರ್ಯದರ್ಶಿ ಯಾಸ್ಮಿನ್, ಜೋನಲ್ ಅಧ್ಯಕ್ಷರುಗಳಾದ ಪೂಜ, ನಮಿತಾ, ಪ್ರಮುಖರಾದ ಮುಮ್ತಾಜಬೇಗಂ, ಶೀಭಾ, ರೂಪ, ಮಂಜುಳ, ಸುಮಲತಾ ಮತ್ತಿತರರು ಹಾಜರಿದ್ದರು.