ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡರು.
ಇದೇ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್ ಮತ್ತು ಸತೀಶ್ ಜಾರಕಿಹೊಳಿ ಸಹ ಅಧಿಕಾರ ಪಡೆದರು.
ಕಾರ್ಯಕ್ರಮಕ್ಕೂ ಆರಂಭಕ್ಕೂ ಮುನ್ನ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪಕ್ಷದ ಕಚೇರಿಗೆ ತೆರಳಿದ ಡಿಕೆಶಿ, ಧ್ವಜಾರೋಹಣ ಮಾಡಿದರು. ನಂತರ ಗಣಪತಿ ವಿಗ್ರಹಕ್ಕೆ ಪುಷ್ಪನಮನ ಸಲ್ಲಿಸಿದರಲ್ಲದೆ, ಭಾರತಮಾತೆಯ ಚಿತ್ರಪಟ, ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಮತ್ತು ಚರಕಗಳಿಗೂ ಪುಷ್ಪಾರ್ಚನೆ ಮಾಡಿದರು.
ನಂತರ ವೇದಿಕೆಯಲ್ಲಿ ಪಕ್ಷದ ಹಿರಿಯ ನಾಯಕ ಎ.ಆರ್. ರೆಹಮಾನ್ ಅವರು ಸಂವಿಧಾನದ ಪೀಠಿಕೆ ಬೋಧಿಸಿದರು. ಹೀಗಾಗಿ ಕಾರ್ಯಕ್ರಮವನ್ನು ಪ್ರತಿಜ್ಞಾ ದಿನ ಎಂದು ಆಚರಿಸಲಾಯಿತು.
ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೇರಳ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತ್ತಾಲ್, ಕೇರಳ ಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಸೇರಿದಂತೆ ಹಲವು ಉಪಸ್ಥಿತರಿದ್ದರು.
ಏಕಕಾಲದಲ್ಲಿ ರಾಜ್ಯಾದ್ಯಂತ ಕಾರ್ಯಕರ್ತರು, ಅಭಿಮಾನಿಗಳು ಕಾರ್ಯಕ್ರಮ ಕಣ್ತುಂಬಿಕೊಳ್ಳಲು ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.