ಹೊಸ ದಿಗಂತ ವರದಿ, ಚಿತ್ರದುರ್ಗ:
ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಕೃಷಿ, ಆರೋಗ್ಯ, ಸಾರಿಗೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸಾಕಷ್ಟು ಒತ್ತು ನೀಡಲಾಗಿದೆ. ಇದೊಂದು ಐತಿಹಾಸಿಕ ಬಜೆಟ್ ಎಂದು ಸಚಿವ ಶ್ರೀರಾಮುಲು ಬಣ್ಣಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಬಜೆಟ್ನಲ್ಲಿ ರಾಜ್ಯಕ್ಕೆ ಭರಪೂರ ಕೊಡುಗೆಗಳು ಸಿಕ್ಕಿದ್ದು, 33 ಹೆದ್ದಾರಿಗಳು, ರೈಲ್ವೇ ಯೋಜನೆಗಳು, ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು ನೀಡಿದ್ದಾರೆ. ಎಪಿಎಂಸಿ ಬಲವರ್ಧನೆಗೆ ಮುಂದಾಗಿದ್ದು, 1 ಸಾವಿರ ಎಪಿಎಂಸಿಗಳನ್ನು ಡಿಜಿಟಲೀಕರಣ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ. ಅನುದಾನ ಒದಗಿಸಿರುವುದು ಇದೇ ಮೊದಲು ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷ ಎ.ಮುರುಳಿ, ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್ ಹಾಜರಿದ್ದರು.