Wednesday, August 10, 2022

Latest Posts

ಕೇಂದ್ರ –ರಾಜ್ಯ ಸರಕಾರಗಳಿಂದ ದುರಹಂಕಾರದ ವರ್ತನೆ: ವೀಣಾ ಅಚ್ಚಯ್ಯ ಕಿಡಿ

ಮಡಿಕೇರಿ: ರಾಜ್ಯ ಹಾಗೂ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ತನ್ನನ್ನು ಯಾರೂ ಕೇಳುವವವರಿಲ್ಲವೆಂದು ದುರಹಂಕಾರದ ವರ್ತನೆಯನ್ನು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು, ಜಾತಿ, ಧರ್ಮದ ಆಧಾರದಲ್ಲಿ ಅಧಿಕಾರಕ್ಕೆ ಬಂದು ಜನಸಾಮಾನ್ಯರಿಗೆ ತೊಂದರೆ ನೀಡುತ್ತಿದೆ ಎಂದು ಟೀಕಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟಿ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ. ಇದರಿಂದಾಗಿ ಲಾಕ್‍ಡೌನ್ ಸಡಿಲಿಕೆಯಾದ ನಂತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಒಂದು ಕಡೆ ಪರಿಹಾರ ಕೊಟ್ಟಂತೆ ಮಾಡಿ ನಿತ್ಯ ಬಳಕೆಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಜನಸಾಮಾನ್ಯರಿಂದ ಮರಳಿ ಕಸಿದುಕೊಳ್ಳುತ್ತಿದೆ. ಕೇಂದ್ರದಲ್ಲಿ ಕರುಣೆ ಇಲ್ಲದ ಸರ್ಕಾರ ಆಡಳಿತ ನಡೆಸುತ್ತಿದ್ದು, ಬಂಡವಾಳಶಾಹಿಗಳಿಗೆ ಉಪಯೋಗವಾಗುವಂತಹ ಪ್ಯಾಕೇಜ್‍ಗಳನ್ನಷ್ಟೇ ಘೋಷಣೆ ಮಾಡುತ್ತಿದೆ ಎಂದು ಆರೋಪಿಸಿದರು.
ಕಾರ್ಮಿಕರ ಕೊರತೆ: ಸರ್ಕಾರದ ಗೊಂದಲಮಯ ನಿರ್ಧಾರಗಳಿಂದಾಗಿ ಜಿಲ್ಲೆಯಲ್ಲಿದ್ದ ಹೊರ ಜಿಲ್ಲೆ ಮತ್ತು ಹೊರ ರಾಜ್ಯದ ಕಾರ್ಮಿಕರುಗಳು ಜಿಲ್ಲೆಯನ್ನು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಇದರಿಂದ ಕೊಡಗಿನಲ್ಲಿ ಕಾರ್ಮಿಕರ ಕೊರತೆ ಎದುರಾಗಿದ್ದು, ಕಟ್ಟಡ ಕಾಮಗಾರಿಗಳು ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಅವರು ದೂರಿದರು. ಉದ್ಯೋಗಖಾತ್ರಿ ಯೋಜನೆಯ ಮೂಲಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಈ ಕಾಮಗಾರಿಗಳಲ್ಲಿ ಸ್ಥಳೀಯ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಬೇಕು ಅಲ್ಲದೆ ಕೇವಲ ಬಡತನ ರೇಖೆಗಿಂತ ಕೆಳಗಿರುವವರನ್ನು ಮಾತ್ರ ಈ ಯೋಜನೆಯಡಿ ನೋಂದಣಿ ಮಾಡುವ ಬದಲು ಜಿಲ್ಲೆಯಲ್ಲಿರುವ ಸಣ್ಣ ಮತ್ತು ಮಧ್ಯಮ ಬೆಳೆಗಾರರನ್ನು ನೋಂದಣಿ ಮಾಡಿ ಕಾಫಿ ತೋಟಗಳ ಅಭಿವೃದ್ಧಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಎಂದು ದೂರಿದರು.
ಸಂತ್ರಸ್ತರಿಗೆ ವಸತಿ ನೀಡಿಲ್ಲ
ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿ ಸಂಭವಿಸಿದ್ದು, ದಕ್ಷಿಣ ಕೊಡಗಿನಲ್ಲಿ ಅನೇಕ ಮನೆಗಳು ಪ್ರವಾಹದಿಂದ ಹಾನಿಗೀಡಾಗಿವೆ. ಬಡವರು ಹಾಗೂ ಕಾರ್ಮಿಕ ವರ್ಗ ಮನೆಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿವೆ. ಘಟನೆ ನಡೆದು ಒಂದು ವರ್ಷ ಕಳೆದರೂ ರಾಜ್ಯ ಸರ್ಕಾರಕ್ಕೆ ಮಳೆಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಮತ್ತು ಮನೆಗಳನ್ನು ನೀಡಲು ಸಾಧ್ಯವಾಗಿಲ್ಲ. ಮನೆ ನಿರ್ಮಿಸಿಕೊಡುವುದಾಗಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ, ಇಲ್ಲಿಯವರೆಗೆ ನಿವೇಶನ ಗುರುತಿಸುವ ಕಾರ್ಯವೇ ಪೂರ್ಣಗೊಂಡಿಲ್ಲ ಎಂದು ಟೀಕಿಸಿದರು.
ವೀರಾಜಪೇಟೆಯ ತೋರ ಗ್ರಾಮ, ನೆಲ್ಯಹುದಿಕೇರಿ, ಕರಡಿಗೋಡು ಸೇರಿದಂತೆ ವಿವಿಧೆಡೆ ಅನೇಕರು ಮಳೆಹಾನಿ ಸಂಕಷ್ಟವನ್ನು ಎದುರಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಇವರುಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. 2018ರಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಅಂದು ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರ ಸುಮಾರು 800 ಮನೆಗಳನ್ನು ನಿರ್ಮಿಸಲು ಯೋಜನೆಯನ್ನು ರೂಪಿಸಿ 450ಕ್ಕೂ ಹೆಚ್ಚು ಮನೆಗಳನ್ನು ಈಗಾಗಲೇ ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ. ಉಳಿದಿರುವ ಮನೆಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಜಿಲ್ಲಾಡಳಿತ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಂತ್ರಸ್ತರಿಗೆ ವಾಸಿಸಲು ಅನುವು ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.
ಜಿಲ್ಲಾಡಳಿತ ಗಮನಿಸಬೇಕು
ನೂತನ ಮನೆ ಸಿಕ್ಕಿದ್ದರೂ ಕೆಲವು ಫಲಾನುಭವಿಗಳು ಅಪಾಯದಂಚಿನಲ್ಲಿರುವ ತಮ್ಮ ಹಳೆಯ ಮನೆಗಳಲ್ಲಿ ವಾಸಿಸುತ್ತಿರುವುದು ಕಂಡು ಬಂದಿದೆ. ಈ ರೀತಿಯ ಬೆಳವಣಿಗೆಗಳಿಗೆ ಜಿಲ್ಲಾಡಳಿತ ಅವಕಾಶ ನೀಡದೆ ಫಲಾನುಭವಿಗಳು ತಮಗೆ ದೊರೆತ ನೂತನ ಮನೆಗಳಲ್ಲೇ ವಾಸಿಸುವಂತೆ ಸೂಚಿಸಬೇಕು. ಈ ಬಾರಿ ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿದ್ದು, ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವೀಣಾ ಅಚ್ಚಯ್ಯ ಒತ್ತಾಯಿಸಿದರು.
ವನ್ಯಜೀವಿಗಳ ಹಾವಳಿ ಬಗ್ಗೆ ನಿರ್ಲಕ್ಷ್ಯ
ಹುಲಿ, ಚಿರತೆ, ಕಾಡಾನೆ ಸೇರಿದಂತೆ ವನ್ಯಜೀವಿಗಳು ವೀರಾಜಪೇಟೆ ತಾಲ್ಲೂಕಿನಲ್ಲಿ ಉಪಟಳ ನೀಡುತ್ತಿದ್ದು, ಸಾಕಷ್ಟು ಫಸಲು, ಜಮೀನು ಮತ್ತು ಜೀವ ಹಾನಿಯಾಗಿದೆ. ಆದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರ ವನ್ಯಜೀವಿ ದಾಳಿಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಂಸದರು ಇಲ್ಲಿಯವರೆಗೆ ರೈತರು, ಬೆಳೆಗಾರರು ಹಾಗೂ ಕಾರ್ಮಿಕರ ಕಷ್ಟ ನಷ್ಟಗಳಿಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಅರಣ್ಯ ಸಚಿವರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ತಕ್ಷಣ ಜಿಲ್ಲೆಗೆ ಕರೆಸಿ ವಿಶೇಷ ಸಭೆ ನಡೆಸಬೇಕು ಮತ್ತು ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಆಗ್ರಹಿಸಿದರು.
ಅನುದಾನ ಏನಾಯಿತು?
ಜಿಲ್ಲೆಯ ರಸ್ತೆಗಳು ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಕಾಣದೆ ಸಂಚಾರಕ್ಕೆ ಅಯೋಗ್ಯವಾಗಿವೆ. ಮಡಿಕೇರಿ ನಗರದ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು, ಇವುಗಳನ್ನು ದುರಸ್ತಿಪಡಿಸುವ ಬಗ್ಗೆ ಆಡಳಿತ ನಡೆಸುತ್ತಿರುವವರು ಕಾಳಜಿ ತೋರುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ರಸ್ತೆ, ಚರಂಡಿ, ತಡೆಗೋಡೆ ನಿರ್ಮಾಣಕ್ಕಾಗಿ ಮಡಿಕೇರಿ ನಗರಸಭೆಗೆ ಬಿಡುಗಡೆಯಾದ ಅನುದಾನ ಎಲ್ಲಿ ಹೋಯಿತು ಎನ್ನುವ ಬಗ್ಗೆ ಸ್ಪಷ್ಟತೆ ಬೇಕಾಗಿದೆ ಎಂದು ವೀಣಾ ಅಚ್ಚಯ್ಯ ನುಡಿದರು.
ಸೇತುವೆ ಕಾಮಗಾರಿ ನೆನೆಗುದಿಗೆ
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಭಾಗಮಂಡಲದಲ್ಲಿ ಮೇಲ್ಸೇತುವೆ ಯೋಜನೆಯನ್ನು ಆರಂಭಿಸಲಾಯಿತು. ಆದರೆ ಸೇತುವೆ ನಿರ್ಮಾಣದ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿದ್ದು, ಇದನ್ನು ಪೂರ್ಣಗೊಳಿಸುವ ಕಾಳಜಿ ತೋರುತ್ತಿಲ್ಲ ಎಂದು ಅವರು ಟೀಕಿಸಿದರು.
ಮಡಿಕೇರಿ ಜಿಲ್ಲೆ ಅಲ್ಲ
ತನ್ನದೇ ಆದ ವಿಶಿಷ್ಟತೆ ಹೊಂದಿರುವ ಕೊಡಗು ಜಿಲ್ಲೆ ಇಡೀ ವಿಶ್ವದ ಗಮನ ಸೆಳೆದಿದೆ. ಆದರೆ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಕೊಡಗು ಜಿಲ್ಲೆಯನ್ನು ಮಡಿಕೇರಿ ಜಿಲ್ಲೆ ಎಂದು ಪ್ರತಿಬಿಂಬಿಸಲಾಗುತ್ತಿದೆ. ವಿಧಾನಸಭೆಯಲ್ಲೂ ಮಡಿಕೇರಿ ಜಿಲ್ಲೆ ಎಂದು ಹೇಳಲಾಗುತ್ತಿದೆ. ಕೊಡಗು ಜಿಲ್ಲೆಯನ್ನು ಕೊಡಗು ಜಿಲ್ಲೆ ಎಂದೇ ಪರಿಗಣಿಸಬೇಕು ಮತ್ತು ಸರ್ಕಾರದ ಕಡತಗಳಲ್ಲೂ ಹೀಗೆ ನಮೂದಿಸಬೇಕು ಎಂದು ವೀಣಾ ಅಚ್ಚಯ್ಯ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಕೆ.ಪೊನ್ನಪ್ಪ, ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ ಹಾಗೂ ಪ್ರಮುಖರಾದ ವಸಂತ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss