ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ಅವರು ಸರಳ, ಸಜ್ಜನಿಕೆಯ ರಾಜಕಾರಣಿಯಾಗಿದ್ದರು ಅವರ ಅಗಲಿಕೆಯಿಂದ ಪಕ್ಷಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿರುವ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಅವರ ಕುಟುಂಬಕ್ಕೆ ಸ್ವಾಂತನ ಹೇಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಸುರೇಶ ಅಂಗಡಿ ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ಅವರ ಪತ್ನಿ ಮಂಗಲಾ ಅಂಗಡಿ ನಮ್ಮ ಮನೆಯಲ್ಲಿ ಬೆಳೆದವರು. ಅವರು ನಮಗೆ ಚಿಕ್ಕ ಸಹೋದರಿ ಇದ್ದ ಹಾಗೆ ಇದ್ದರು. ಅವರಿಗೆ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬೇಡಿಕೊಂಡಿದ್ದೇನೆ ಎಂದರು.
ಕೇಂದ್ರ ಸಚಿವ ಸುರೇಶ ಅಂಗಡಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹಾಗೂ ನಾವು ಒಂದು ತಂಡ ರಚನೆ ಮಾಡಿಕೊಂಡು ರಾಜಕೀಯವಾಗಿ ದೊಡ್ಡ ಶಕ್ತಿಯಾಗಿದ್ದೇವು. ಆತ್ಮೀಯ ಗೆಳೆಯನ ಸಾವಿನಿಂದ ವಿಚಲಿತನಾಗಿದ್ದೇನೆ ಎಂದರು.
ಕೇಂದ್ರ ಸಚಿವ ಸುರೇಶ ಅಂಗಡಿ ಪಕ್ಷಾತೀತವಾಗಿ ಎಲ್ಲರ ಕೆಲಸ ಮಾಡಿಕೊಡುತ್ತಿದ್ದರು. ಅವರಿಗೆ ಕಾಂಗ್ರೆಸ್, ಬಿಜೆಪಿಯವರು ಯಾರೂ ವಿರೋಧ ಮಾಡುತ್ತಿರಲಿಲ್ಲ. ನಾನು ಕಾಂಗ್ರೆಸ್ನಲ್ಲಿದ್ದಾಗ ಸಾಕಷ್ಟು ಕೆಲಸ ತೆಗೆದುಕೊಂಡು ಬಂದರೆ ತಕ್ಷಣ ಆ ಕೆಲಸವನ್ನು ಮಾಡಿಕೊಡುತ್ತಿದ್ದರು. ಅವರೊಬ್ಬ ಸರಳ ಸಜ್ಜನಿಕೆಯ ರಾಜಕಾರಣಿ ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.
ಬಿಜೆಪಿ ಮುಖಂಡ ಕಿರಣ ಜಾಧವ, ದೀಪಾ ಕುಡಚಿ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.