Wednesday, August 10, 2022

Latest Posts

ಕೊಡಗು: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ : ನಿರ್ಬಂಧಕಾಜ್ಞೆ ಜಾರಿ

ಕೊಡಗು: ಕೊಡಗು ಜಿಲ್ಲೆಯಲ್ಲಿ ಸೆ. 21 ರಿಂದ 28ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಸುವ ಸಲುವಾಗಿ ಸೋಮವಾರಪೇಟೆ, ಕುಶಾಲನಗರ, ಮಡಿಕೇರಿ, ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಮಡಿಕೇರಿ ಸಂತ ಮೈಕಲರ ಪ್ರೌಢಶಾಲೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.

ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತ್ತು ಉತ್ತರ ಪತ್ರಿಕೆಗಳನ್ನು ಶೇಖರಿಸಿಡುವ ಮಡಿಕೇರಿ ಸಂತ ಮೈಕಲರ ಶಾಲೆ ಇಲ್ಲಿರುವ ಸ್ಟ್ರಾಂಗ್ ರೂಮ್‍ನ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಈ ಆದೇಶ ಜಾರಿಯಲ್ಲಿರಲಿದ್ದು,ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು, ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧ ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಪರೀಕ್ಷೆ ಸಂಬಂಧ ಸರ್ಕಾರ ಹೊರಡಿಸಿರುವ ಕೋವಿಡ್-19 ಕಾರ್ಯ ವಿಧಾನದಂತೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss