Tuesday, June 28, 2022

Latest Posts

ಕೊಡಗು ಜಿಲ್ಲೆಯಲ್ಲಿ ಡಿಸೆಂಬರ್ ವೇಳೆಗೆ ಬಾಕಿ 242 ಮನೆಗಳ ಹಸ್ತಾಂತರ: ವಿ.ಸೋಮಣ್ಣ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ 2018ರ ಆಗಸ್ಟ್‍ನಲ್ಲಿ ಸುರಿದ ಧಾರಾಕಾರ ಮಳೆಗೆ ಸಂತ್ರಸ್ತರಾದ ಕುಟುಂಬಗಳಿಗೆ ಈಗಾಗಲೇ 498 ಮನೆಗಳನ್ನು ಹಸ್ತಾಂತರಿಸಲಾಗಿದ್ದು, ಉಳಿದ 242 ಮನೆಗಳನ್ನು ಡಿಸೆಂಬರ್ ವೇಳೆಗೆ ಸಂತ್ರಸ್ತರಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಜಿಲ್ಲಾಡಳಿತ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪುನರ್ವಸತಿ ಯೋಜನೆ ಅಡಿಯಲ್ಲಿ 2018ರ ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಜಂಬೂರು ಹಾಗೂ ಮದೆ ಗ್ರಾಮದಲ್ಲಿ ಗುರುವಾರ ಮನೆ ಹಕ್ಕು ಪತ್ರ ಹಾಗೂ ಕೀ ಯನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಈಗಾಗಲೇ ಕರ್ಣಂಗೇರಿಯಲ್ಲಿ 35, ಜಂಬೂರು 383 ಮತ್ತು ಮದೆ ಗ್ರಾಮದ ಬಳಿ 80 ಒಟ್ಟು 498 ಮನೆಗಳನ್ನು ಈಗಾಗಲೇ ಹಸ್ತಾಂತರಿಸಲಾಗಿದೆ. ಉಳಿದಂತೆ ಬಿಳಿಗೇರಿ ಬಳಿ 22, ಗಾಳಿಬೀಡು ಬಳಿ 140 ಮತ್ತು ಕೆ.ನಿಡುಗಣೆ ಬಳಿ 80 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈ 242 ಮನೆಗಳನ್ನು 6-7 ತಿಂಗಳಲ್ಲಿ ಸಂತ್ರಸ್ತರಿಗೆ ಹಸ್ತಾಂತರಿಸಲಾಗುವುದು ಎಂದು ವಿವರಿಸಿದರು.
ಇನ್ಫೋಸಿಸ್ ವತಿಯಿಂದ ಸಹ 250 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಅದನ್ನೂ ಹಸ್ತಾಂತರಿಸಲಾಗುವುದು ಎಂದ ಸಚಿವರು, ಸರ್ಕಾರ ಪ್ರತಿ ಮನೆಗೆ 9.85 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಗಳನ್ನು ನಿರ್ಮಿಸಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮನೆ ಮಾರಿಕೊಳ್ಳಬಾರದು ಎಂದು ಫಲಾನುಭವಿಗಳಲ್ಲಿ ಮನವಿ ಮಾಡಿದರು.
ಕೊಡಗಿನಲ್ಲಿ ಮಳೆ ಬಂದರೆ ಜನತೆ ತೊಂದರೆ ಅನುಭವಿಸುತ್ತಿದ್ದರು. ಇದನ್ನು ಅರಿತು 2018ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಈಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಸಂತ್ರಸ್ತರಿಗೆ ಹಸ್ತಾಂತರಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಸೋಮಣ್ಣ ಪ್ರತಿಭಟನಾಕಾರರಿಗೆ ಕಿವಿಮಾತು ಹೇಳಿದರು.
ಕಂದಾಯ ಸಚಿವರಾದ ಆರ್.ಅಶೋಕ್ ಅವರು ಮಾತನಾಡಿ, 2019 ರಲ್ಲಿ ಸುರಿದ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಲು 5 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಡವರಿಗೆ ಮನೆ ನಿರ್ಮಿಸಿಕೊಡಲು ಹಣದ ಕೊರತೆಯಿಲ್ಲ . ಕೊಡಗಿನ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿದಾಗ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲು ಸಾಧ್ಯ ಎಂದು ನುಡಿದರು.
ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದ ಪ್ರತಾಪ್‍ಸಿಂಹ, ಜಿ.ಪಂ.ಅಧ್ಯಕ್ಷ ಬಿ.ಎ ಹರೀಶ್, ಸದಸ್ಯರಾದ ಚಂದ್ರಕಲಾ, ಕುಮುದಾ ಧರ್ಮಪ್ಪ, ಸೋಮವಾರಪೇಟೆ ತಾ.ಪಂ.ಅಧ್ಯಕ್ಷೆ ಪುಷ್ಪ ರಾಜ್, ಉಪಾಧ್ಯಕ್ಷ ಅಭಿಮನ್ಯುಕುಮಾರ್, ಮಡಿಕೇರಿ ತಾ.ಪಂ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಮಾದಾಪುರ ಗ್ರಾ.ಪಂ.ಅಧ್ಯಕ್ಷೆ ಲತಾ, ಮದೆ ಗ್ರಾ.ಪಂ.ಅಧ್ಯಕ್ಷ ಎಂ.ಬಿ ಚಂದ್ರಶೇಖರ್, ವಸತಿ ಇಲಾಖೆ ಕಾರ್ಯದರ್ಶಿ, ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ರಾಮ್ ಪ್ರಸಾದ್ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪುನರ್ವಸತಿ ವಿಭಾಗದ ಹಿಂದಿನ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ರಾಜೀವ್ ಗಾಂಧಿ ವಸತಿ ನಿಗಮದ ಯೋಜನಾ ನಿರ್ದೇಶಕ ಎಚ್.ಶ್ರೀನಿವಾಸ್ ಇತರರು.
ಮನೆ ನಿರ್ಮಾಣಕ್ಕೆ ಶ್ರಮಿಸಿದ ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧೀ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ರಾಮ್ ಪ್ರಸಾಜಜಿಜಿ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಹಾಗೂ ಹಿಂದಿನ ಜಿಲ್ಲಾ ಪುನರ್ವಸತಿ ವಿಭಾಗದ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ರಾಜೀವ್ ಗಾಂಧೀ ವಸತಿ ನಿಗಮದ ಯೋಜನಾ ನಿರ್ದೇಶಕ ಎಚ್.ಶ್ರೀನಿವಾಸ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂಧಿಸಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss