Friday, August 19, 2022

Latest Posts

ಕೊಡಗು ಜಿಲ್ಲೆಯಲ್ಲಿ ಪಿಯು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜೂ. 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳ ಸುತ್ತ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಾದ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು, ನಾಪೋಕ್ಲು, ಪೊನ್ನಂಪೇಟೆ, ಸೋಮವಾರಪೇಟೆ, ವೀರಾಜಪೇಟೆ, ಮಡಿಕೇರಿ, ಕುಶಾಲನಗರ, ನೆಲ್ಯಹುದಿಕೇರಿ ಮತ್ತು ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು ಹಾಗೂ ವೀರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಮೊಬೈಲ್-ಸ್ಮಾರ್ಟ್ ವಾಚ್ ನಿಷಿದ್ಧ 
ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದಾಗಿದ್ದು, ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!