Wednesday, June 29, 2022

Latest Posts

ಕೊಡಗು ಜಿಲ್ಲೆಯಲ್ಲಿ ಶೇ.51ರಷ್ಟು ಸೋಂಕಿತರು ಗುಣಮುಖ; ಸಾರ್ವಜನಿಕರು ಭಯ-ಆತಂಕ ಪಡುವ ಅಗತ್ಯವಿಲ್ಲ: ಜಿಲ್ಲಾಧಿಕಾರಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದೃಢಪಟ್ಟ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರೊಂದಿಗೆ ಗುಣಮುಖರಾಗುವವರ ಪ್ರಮಾಣವೂ ಶೇ.51ರಷ್ಟಿರುವುದರಿಂದ ಕೋವಿಡ್ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಯಾವುದೇ ಭಯ ಅಥವಾ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 225 ದೃಢಪಟ್ಟ ಪ್ರಕರಣಗಳಿದ್ದು, ಬುಧವಾರ 28 ಮಂದಿ ಗುಣಮುಖರಾಗುವುದರೊಂದಿಗೆ ಒಟ್ಟು 115 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಪ್ರತಿಶತ 51 ರಷ್ಟು ಕೋವಿಡ್ ಪ್ರಕರಣಗಳು ಗುಣಮುಖವಾಗುತ್ತಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 107 ಮಾತ್ರ ಸಕ್ರಿಯ ಪ್ರಕರಣಗಳಿವೆ. ಸಕ್ರಿಯವಾಗಿರುವ ಪ್ರಕರಣಗಳ ಪೈಕಿ ಎಲ್ಲರೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಅವರುಗಳ ಆರೋಗ್ಯ ಸ್ಥಿರವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
ಕೋವಿಡ್ ಪ್ರಕರಣಗಳಲ್ಲಿ ಗುಣಮುಖ ಹೊಂದುತ್ತಿರುವ ದರವು ಜಿಲ್ಲೆಯಲ್ಲಿ ತೃಪ್ತಿಕರವಾಗಿರುವುದರಿಂದ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಯಾವುದೇ ಭಯ ಅಥವಾ ಆತಂಕ ಪಡುವ ಅಗತ್ಯ ಇರುವುದಿಲ್ಲ ಮತ್ತು ಜನರು ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.
ಎರಡು ಸಾವಿರಕ್ಕೂ ಅಧಿಕ ಮಂದಿಗೆ ಸಂಪರ್ಕ ತಡೆ: ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇತರೆ ದೇಶ, ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. ಅದರಂತೆ ಕಳೆದ 14 ದಿನಗಳಲ್ಲಿ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಇತರೆ ದೇಶದ 14, ಇತರೆ ರಾಜ್ಯದ 587ಹಾಗೂ ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಗಳ 1429 ಮಂದಿಯನ್ನು ಸಂಪರ್ಕ ತಡೆಯಲ್ಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 11,609 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ ಕೇವಲ 225 ಪ್ರಕರಣಗಳಲ್ಲಿ ಪಾಸಿಟಿವ್ ಬಂದಿದ್ದು, 10551 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ. 883 ಮಂದಿ ವರದಿಯ ನಿರೀಕ್ಷೆಯಲ್ಲಿದ್ದು, ಮೂರು ಮಾತ್ರ ಮೃತಪಟ್ಟಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಪ್ರಸಕ್ತ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 60, ಕೋವಿಡ್ ಕೇರ್ ಸೆಂಟರ್‍ನಲ್ಲಿ 7 ಹಾಗೂ ಹೋಂ ಐಸೋಲೇಷನ್‍ನಲ್ಲಿ 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಹೊಸದಾಗಿ 8 ಪ್ರಕರಣ ವರದಿಯಾಗಿದ್ದು, 28 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss