ಮಡಿಕೇರಿ: ಮಳೆಗಾಲ ಸಮೀಪಿಸುತ್ತಿರುವುದರಿಂದ ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ ಮಳೆಯಿಂದ ಹಾನಿಗೊಳಗಾದ ರಸ್ತೆ, ಸೇತುವೆ, ತಡೆಗೊಡೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿರ್ದೇಶನ ನೀಡಿದ್ದಾರೆ.
ಮಂಗಳವಾರ ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಸಂಬಂಧದ ಕಾಮಗಾರಿಗಳಿಗೆ ಅನುಮತಿ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವೀರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಡಿಕೇರಿಯ ಬಿಸಿಎಂ ಹಾಸ್ಟೆಲ್ಗಳಲ್ಲಿ ಆಶ್ರಯ ಪಡೆದಿರುವ ಹೊರಜಿಲ್ಲೆಯ ಕಾರ್ಮಿಕರು, ರೈತರು ಹಾಗೂ ಕೊಡಗಿಗೆ ಕಾಫಿ ಫಸಲು ಕೊಯ್ಲಿಗಾಗಿ ಬಂದಿದ್ದ ಹೊರಜಿಲ್ಲೆ ಕಾರ್ಮಿಕರನ್ನು ವಾಪಸ್ ಕಳುಹಿಸಲು ಕೂಡಾ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.
ಗ್ರಾಮೀಣ ಅಭಿವೃದ್ದಿ ಇಲಾಖೆಗೆ ಈ ಮೊದಲು ಸಲ್ಲಿಸಿದ್ದ 19 ಕೋಟಿ ರೂ. ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆಯನ್ನೂ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.