ಕೊಡಗು: ಹವಾಮಾನ ಇಲಾಖೆ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ವಾಡಿಕೆಯಂತೆ ಜೂನ್ ಮೊದಲ ವಾರದಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇರುವುದರಿಂದ ಮರಳು ಹಾಗೂ ಮರದ ದಿಮ್ಮಿ ಸಾಗಾಣಿಕೆ ನಿರ್ಬಂಧ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಚರ್ಚಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಯಿತು. ಜಿಲ್ಲೆಯಲ್ಲಿ ರಸ್ತೆ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿ ಸಂರಕ್ಷಣೆ ಮಾಡುವ ಉದ್ದೇಶದಿಂದ ಪ್ರತೀ ವರ್ಷದಂತೆ ಈ ಬಾರಿಯೂ ಸಹ ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಭಾರೀ ವಾಹನ ಸಂಚಾರ, ಮರಳು ಹಾಗೂ ಮರದ ದಿಮ್ಮಿಗಳ ಸಾಗಾಣಿಕೆ ನಿರ್ಬಂಧ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಸಭೆಯಲ್ಲಿ ಸಮಾಲೋಚಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪಿ.ಸುಮನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ರೇಷ್ಮ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ ಇತರರು ಇದ್ದರು.