ಮಡಿಕೇರಿ: ಕೊಡಗು ಜಿಲ್ಲೆಗೆ ಕಳೆದ ೧೪ ದಿನಗಳಲ್ಲಿ ಪಾಸ್ಗಳನ್ನು ಪಡೆದು ಬಂದಿರುವ ಇತರ ದೇಶ, ರಾಜ್ಯ ಹಾಗೂ ಜಿಲ್ಲೆಗಳ ಒಟ್ಟು ೪೯೩ ಮಂದಿ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಇತರೆ ದೇಶ/ರಾಜ್ಯಗಳಿಂದ ಪಾಸ್ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ೧೪ ದಿನಗಳ ಕಾಲ ಸಾಂಸ್ಥಿಕ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. ಅದರಂತೆ ಇತರ ದೇಶದ ೧೩, ಇತರ ರಾಜ್ಯದ ೪೮೦ ಮಂದಿ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕೋವಿಡ್-೧೯ ಹರಡದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಒಟ್ಟು ೨೦೦೮ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ ಎರಡು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಬ್ಬರು ಗುಣಮುಖರಾಗಿದ್ದು, ಮತ್ತೊಬ್ಬರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ೧೬೮೪ ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದ್ದು, ೩೨೨ ಪ್ರಕರಣಗಳಲ್ಲಿ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ೭೯ ಮಂದಿ ದಾಖಲಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.