ಮೈಸೂರು: ಮಹಾಮಾರಿ ಕೊರೋನಾಗೆ ಮುಖ್ಯ ಪೊಲೀಸ್ ಪೇದೆಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹದೇವಸ್ವಾಮಿ (೩೩) ಕೊರೋನಾ ಸೋಂಕಿನಿಂದ ಮೃತಪಟ್ಟವರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದ ನಿವಾಸಿಯಾದ ಇವರು ಆಗಸ್ಟ್ ೧೨ರಂದು ರ್ಯಾಪಿಡ್ ಆಂಟಿಜೆನ್ ಟೆಸ್ಟ್ನಲ್ಲಿ ಕೊರೊನಾ ಇರುವುದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ತೆರಳದೆ ಮನೆಯಲ್ಲೇ ಐಸೋಲೇಷನ್ನಲ್ಲಿದ್ದ. ಬುಧವಾರ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಹೋದಾಗ ಬೆಡ್ಇಲ್ಲ ಎಂದು ದಾಖಲಿಸಿಕೊಳ್ಳಲು ನಿರಾಕರಿಸಲಾಗಿದೆ. ಬಳಿಕ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸುವ ಪ್ರಯತ್ನ ನಡೆಸಲಾಗಿದೆ.
ಆದರೆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ಗಳು ಇಲ್ಲ ಎಂದು ದಾಖಲಿಸಿಕೊಳ್ಳದ ಕಾರಣ, ಸುಮಾರು ನಾಲ್ಕು ಗಂಟೆಗಳ ಕಾಲ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿಲ್ಲ, ಕೊನೆಗೆ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮಹದೇವಸ್ವಾಮಿ ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಅವರು ಮೃತಪಟ್ಟ ದಿನವೇ ವಿವಾಹ ವಾರ್ಷಿಕೋತ್ಸವ ಬಂದಿತ್ತು. ಆದರೆ ಇದೀಗ ಅವರನ್ನೇ ಕಳೆದುಕೊಂಡಿರುವ ಕುಟುಂಬ ದುಃಖದ ಮಡುವಿನಲ್ಲಿದೆ.