Sunday, August 14, 2022

Latest Posts

ಕೋಲಾರ| ಕೋವಿಡ್-19 ನಿಯಂತ್ರಿಸಲು ಜಿಲ್ಲಾಡಳಿತದಿಂದ ಎಲ್ಲಾ ಕ್ರಮ: ಉಸ್ತುವಾರಿ ಸಚಿವ ಹೆಚ್.ನಾಗೇಶ್

ಕೋಲಾರ:  ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಿಸಲು ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ ಎಂದು ಅಬಕಾರಿ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್  ತಿಳಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ನಿಯಂತ್ರಣದ ವಿಚಾರವಾಗಿ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳ ಕಾರ್ಯವೈಖರಿಯಿಂದ ಕರೋನವನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದರು.
ಜಿಲ್ಲೆಯಲ್ಲಿ ಇದುವರೆಗೂ ೧೪೯೭ ಕೋವಿಡ್ ಸೋಂಕಿತರಿದ್ದು, ೮೦೬ ಜನ ಗುಣಮುಖರಾಗಿದ್ದಾರೆ, ೨೯ ಜನ ಕೋವಿಡ್-೧೯ ನಿಂದ ಮೃತ ಪಟ್ಟಿದ್ದು, ೬೬೨ ಕೋವಿಡ್-೧೯ ಪ್ರಕರಣಗಳು ಸಕ್ರಿಯವಾಗಿವೆ ಎಂದ ಅವರು ಜಿಲ್ಲೆಯಲ್ಲಿ ಕೋವಿಡ್-೧೯ ರಿಂದ ಮೃತ ಪಟ್ಟವರ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು.
ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಅವಶ್ಯಕವಿರುವ ಉಪಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್. ರಮೇಶ್ ಕುಮಾರ್ ಅವರು ಮಾತನಾಡಿ, ಕೋವಿಡ್-೧೯ ಸಾಂಕ್ರಮಿಕ ರೋಗದ ಬಗ್ಗೆ ಗ್ರಾಮೀಣ ಜನರಲ್ಲಿ ಅರಿವು ಕಡಿಮೆಯಿದ್ದು, ಮಾಧ್ಯಮಗಳ ಮೂಲಕ ಜನರಿಗೆ ಅರಿವನ್ನು ಮೂಡಿಸಬೇಕು ಎಂದರು.
ಕೋವಿಡ್ ಅಲ್ಲದ ರೋಗಿಗಳು ಆಸ್ಪತ್ರೆಗೆ ಬಂದಂತಹ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್-೧೯ ಟೆಸ್ಟ್ ಮಾಡುವಂತೆ ವೈದ್ಯರು ಒತ್ತಡ ಹೇರುತ್ತಿದ್ದು, ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು.  ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್ ಅವರು ಮಾತನಾಡಿ ಕೋವಿಡ್ ಅಲ್ಲದ ರೋಗಿಗಳಿಗೆ ಪ್ರತ್ಯೇಕವಾಗಿ ೧೦೦ ಹಾಸಿಗೆಗಳನ್ನು ಮೀಸಲಿಡಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಿಸಲು ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದಾರೆ.  ಕೋವಿಡ್-೧೯ ಸೋಂಕಿಗೆ ತುತ್ತಾದ ವ್ಯಕ್ತಿಯ ಮನೆಯ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯವನ್ನಾಗಿ ಪರಿವರ್ತಿಸಲಾಗುತ್ತದೆ.  ಕಂಟೈನ್‌ಮೆಂಟ್ ವಲಯಗಳಿಗೆ ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಬರುವುದಿಲ್ಲ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದ ರಾಜು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಕೆ.ಜಿ.ಎಫ್. ಪೊಲೀಸ್ ವರಿಷ್ಠಾಧಿಕಾರಿ ಇಲಕಿಯಾ ಕರುಣಾಕರನ್, ಅಪರ ಜಿಲ್ಲಾಧಿಕಾರಿ ಶಿವಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ವಿಜಯ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಚಾರಿಣಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss