Monday, August 8, 2022

Latest Posts

ಕೋಲಾರ| ಕ್ವಾರಂಟೈನ್ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ: ಉಮಾ ಮಹಾದೇವನ್

ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಶಂಕಿತ ವ್ಯಕ್ತಿಗಳನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಮಾಡುತ್ತಿದ್ದು,  ಈ ಕ್ವಾರಂಟೈನ್ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಹಾಗೂ ಸ್ವಚ್ಛತೆಯನ್ನು ಕಾಪಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್  ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಕೋವಿಡ್-೧೯ ಕುರಿತಂತೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇರಳದ ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದರಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದೆ.  ಸ್ವಚ್ಛತೆ ಇಲ್ಲದಿದ್ದರೆ ವೈರಸ್ ಬೇಗ ಹರಡುತ್ತದೆ.  ಕೇರಳದಲ್ಲಿ ೯೩ ವರ್ಷದ ವ್ಯಕ್ತಿಯನ್ನು ಸಹ ಗುಣಪಡಿಸಲಾಗಿದೆ. ಈ ನಿಟ್ಟಿನಲ್ಲಿ ವೈದ್ಯರು ಚಿಕಿತ್ಸೆಯನ್ನು ನೀಡಿ ಗುಣಮುಖರಾಗುವ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.
ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವ ಡ್ರೈವರ್ ಮತ್ತು ಕ್ಲೀನರ್‌ಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ ಪಾಸಿಟಿವ್ ಪ್ರಕರಣ ಹೊಂದಿರುವ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪರೀಕ್ಷೆಗೆ ಒಳಪಡಿಸಿ ಕಡ್ಡಾಯವಾಗಿ ನಿಗಧಿತ ಅವಧಿಯ ಕ್ವಾರಂಟೈನ್‌ನಲ್ಲಿ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಗತ್ಯ ವಸ್ತುಗಳ ಅಂಗಡಿಗಳು ಸಾರ್ವಜನಿಕರಿಗೆ ಸದಾಕಾಲ ದೊರೆಯುವಂತೆ ನೋಡಿಕೊಳ್ಳಿ, ಈ ಅಂಗಡಿಗಳನ್ನು ೩ ಶಿಫ್ಟ್‌ಗಳಾಗಿ ವಿಂಗಡಿಸಿ ತೆರೆಯುವ ಹಾಗೆ ವ್ಯವಸ್ಥೆ ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ. ಜನರು ಗುಂಪು ಸೇರದಂತೆ ಜಾಗ್ರತೆ ವಹಿಸಿ. ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಬರಬಾರದು. ಅನಿವಾರ್ಯ ಕಾರಣಗಳಿಂದ ಓಡಾಡಬೇಕಾದವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.  ಸಾಮಾಜಿಕ ಅಂತರವನ್ನು ಪಾಲನೆ ಮಾಡಬೇಕು.  ಸಾರ್ವಜನಿಕರು ಅಗತ್ಯ ವಸ್ತುಗಳನ್ನು ದಿನದಲ್ಲಿ ೧ ಬಾರಿ ಮಾತ್ರ ಖರೀದಿಸಿ ಮನೆಯಲ್ಲಿರಬೇಕು.  ಪದೇ ಪದೇ ಅಂಗಡಿಗಳಿಗೆ ಹೋಗುವುದನ್ನು ನಿಲ್ಲಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ಜಿಲ್ಲೆಯಲ್ಲಿ ಇದುವರೆಗೆ ೯ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಇವರ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ಕ್ವಾರಂಟೈನ್ ಮಾಡಲಾಗಿದೆ.  ಪಾಸಿಟಿವ್ ಪ್ರಕರಣ ಕಂಡು ಬಂದರೆ ಗ್ರಾಮೀಣ ಪ್ರದೇಶದಲ್ಲಿ ಆ ಗ್ರಾಮವನ್ನು ಸಂಪೂರ್ಣ ಹಾಗೂ ನಗರ ಪ್ರದೇಶದಲ್ಲಿ ೧೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್‌ಮೆಂಟ್ ಜೋನ್ ಎಂದು ಗುರುತಿಸಲಾಗುತ್ತದೆ.  ಜಿಲ್ಲೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ.  ಹೊರ ರಾಜ್ಯದಿಂದ ಬರುವ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಹೆಚ್.ವಿ. ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಕೆ.ಜಿ.ಎಫ್. ಪೊಲೀಸ್ ವರಿಷ್ಠಾಧಿಕಾರಿಗಳಾದ ಮಹಮದ್ ಸುಜೀತಾ, ಅಪರ ಜಿಲ್ಲಾಧಿಕಾರಿಗಳಾದ ಶಿವಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿಜಯಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ನಾರಾಯಣಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಚಾರಿಣಿ, ತಹಸೀಲ್ದಾರ್ ಆರ್.ಶೋಭಿತಾ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss