Wednesday, January 20, 2021

Latest Posts

ಕೋವಿಡ್ ಲಸಿಕಾ ಅಭಿಯಾನ ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅನ್ಬುಕುಮಾರ್

ಹೊಸ ದಿಗಂತ ವರದಿ, ಮಡಿಕೇರಿ:

ಕೋವಿಡ್ ಲಸಿಕಾ ಅಭಿಯಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ
ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನ ಸಂಬಂಧ ಬುಧವಾರ ಮಾಹಿತಿ ಪಡೆದು ಅವರು ಮಾತನಾಡಿದರು.
ಕೋವಿಡ್ ಲಸಿಕೆ ಪೂರೈಕೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ನಿಯಮಾನುಸಾರ ಜಿಲ್ಲೆಗೆ ತರಿಸಿಕೊಳ್ಳಬೇಕು. ಲಸಿಕೆ ದಾಸ್ತಾನು ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.
ಕೋವಿಡ್ ಲಸಿಕಾ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ರೀತಿಯ ವದಂತಿಗಳಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ 5,049 ಹಾಗೆಯೇ 1,511 ಖಾಸಗಿ ಆಸ್ಪತ್ರೆ ವ್ಯಾಪ್ತಿಯ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರಾಥಮಿಕ, ಸಮುದಾಯ ಹಾಗೂ ವೈದ್ಯಕೀಯ ಶಿಕ್ಷಣ ವ್ಯಾಪ್ತಿಯ ಒಟ್ಟು 39 ಕಡೆಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ನುಡಿದರು.
ಜಿಲ್ಲೆಯಲ್ಲಿ ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ 50 ಮಂದಿ ಹೋಮ್ ಐಸೋಲೇಷನ್‍ನಲ್ಲಿ ಇದ್ದಾರೆ ಎಂದು ಡಾ.ಕೆ.ಮೋಹನ್ ತಿಳಿಸಿದರು.
ಕೋವಿಡ್ ನಿರ್ವಹಣೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜಿನ ಅಧೀಕ್ಷಕ ಲೋಕೇಶ್ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!