ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮಂಡ್ಯ:
ವೈದ್ಯಕೀಯ ವಿದ್ಯಾರ್ಥಿಗಳಿಗೆ ಕ್ರೀಡೆ ಅತ್ಯವಶ್ಯ, ಎಲ್ಲಾ ವಿದ್ಯಾರ್ಥಿಗಳೂ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಸ್ಥೈರ್ಯ ಹೆಚ್ಚಿಸಿಕೊಳ್ಳಬೇಕೆಂದು ಮಿಮ್ಸ್ ಪ್ರಾಂಶುಪಾಲ ಡಾ.ಕೆ.ಎಂ.ಶಿವಕುಮಾರ್ ಸಲಹೆ ನೀಡಿದರು.
ನಗರದ ಮಿಮ್ಸ್ ಕ್ರೀಡಾಗಂಣದಲ್ಲಿ ವಿರಾಟ್-2021 ಅಥ್ಲೆಟಿಕ್ ಮೀಟ್ ಚಾಂಪಿಯನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಹುಮಾನ ವಿತರಿಸಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರದಿಂದ ಹೆಚ್ಚಿನ ನೆರವು ಲಭಿಸುತ್ತಿದೆ. ಇದರಿಂದ ಮಿಮ್ಸ್ನ ಕ್ರೀಡಾಂಗಣವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಸರ್ಕಾರವೂ ಇದಕ್ಕೆ ಪೂರಕವಾಗಿ ಸ್ಪಂದಿಸುತ್ತಿದ್ದು, ವೈದ್ಯ ವಿದ್ಯಾರ್ಥಿಗಳಿಗೆ ಕ್ರೀಡಾಸಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತಿದೆ ಎಂದರು.
ಈ ವೇಳೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದ ವೈದ್ಯ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಮೆಡಲ್, ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪಿ.ವಿ.ಶ್ರೀಧರ್, ನಿಲಯಪಾಲಕ ಡಾ.ಡಿ.ಆರ್.ಹರೀಶ್, ಕ್ರೀಡಾ ಸಮಿತಿ ಸದಸ್ಯ ಡಾ.ಸಿದ್ದೇಗೌಡ, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ತಮ್ಮಣ್ಣ, ಕ್ರೀಡಾ ನಿರ್ದೇಶಕ ಡಾ.ಸುರೇಶ್ ಮತ್ತಿತರರಿದ್ದರು.