Wednesday, August 10, 2022

Latest Posts

ಖಾಸಗಿ ಆಸ್ಪತ್ರೆಯ ಸೌಲಭ್ಯಗಳನ್ನು ಪರಿಶೀಲಿಸಿ ಅನುಮತಿ ನೀಡಿ: ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಅವರು ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ  ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು. ಖಾಸಗಿ ಆಸ್ಪತ್ರೆಯವರು ಕೂಡ ಕೋವಿಡ್ ಹಾಗೂ ಇತರೆ ಚಿಕಿತ್ಸೆ ನೀಡಲು ಮುಂದೆ ಬರುತ್ತಿದ್ದು, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ವತಿಯಿಂದ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಬೇಕು ಎಂದರು.
ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿದ ದರಪಟ್ಟಿಯ ಪ್ರಕಾರ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಿದರೆ ಆಯಾ ತಾಲ್ಲೂಕು ಪ್ರದೇಶಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸಬಹುದು ಎಂದರು.
ಇದು ಪರೀಕ್ಷೆ ಕಾಲವಾಗಿದೆ. ಆದ್ದರಿಂದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯೆ ಮಧ್ಯೆಯೂ ಜನರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸಬೇಕಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಅಥಣಿ ಸೇರಿದಂತೆ ಕೆಲವು ಕಡೆ ಖಾಸಗಿ ಆಸ್ಪತ್ರೆಗಳು ಕೂಡ ಕೋವಿಡ್ ಚಿಕಿತ್ಸೆಗೆ ಮುಂದಾಗುತ್ತಿದ್ದು, ಅಂತಹವರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲು ಪರಿಶೀಲಿಸಬೇಕು ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.
ಶಾಸಕ ದುರ್ಯೋಧನ ಐಹೊಳೆ, ಕೋವಿಡ್ ನಿರ್ವಹಣೆಗೆ ಅಗತ್ಯವಿರುವ ಆಸ್ಪತ್ರೆ ವ್ಯವಸ್ಥೆಯನ್ನು ತಾಲ್ಲೂಕು ಮಟ್ಟದಲ್ಲಿ ಕಲ್ಪಿಸಬೇಕು ಎಂದು ಹೇಳಿದರು.
ಶೇ.40 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ.
ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ತಾಲ್ಲೂಕುವಾರು ಸೋಂಕಿತರಿಗೆ ಆಯಾ ತಾಲ್ಲೂಕು ಆಸ್ಪತ್ರೆ ಮತ್ತು ಕೇಂದ್ರಗಳಲ್ಲಿ ಆರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
70 ಕ್ಕೂ ಅಧಿಕ ಸೋಂಕಿತ ಮಹಿಳೆಯರ ಹೆರಿಗೆ ಮಾಡಿಸಲಾಗಿದೆ.
ಪ್ರತಿದಿನ ರಾಜ್ಯಮಟ್ಟದಲ್ಲಿ ನಿಗದಿತ ಗುರಿಯಂತೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇದಲ್ಲದೇ ತುರ್ತು ಚಿಕಿತ್ಸೆಗೆ ಅಗತ್ಯವಿದ್ದಾಗ ಸರಕಾರಿ ವೈದ್ಯಕೀಯ ತಂಡ ಖಾಸಗಿ ಆಸ್ಪತ್ರೆಗೇ ತೆರಳಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.
ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಇನ್ನೆರಡು‌ ದಿನಗಳಲ್ಲಿ ರಾಜೀವ ಗಾಂಧಿ ವಸತಿ ನಿಗಮದಿಂದ ಎರಡನೇ ಕಂತು ಕೂಡ ಬಿಡುಗಡೆಯಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಸದ್ಯಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಆದರೆ ನರ್ಸಿಂಗ್ ಸಿಬ್ಬಂದಿ ಕೊರತೆ ಇರುವುದರಿಂದ ನಿರಂತರವಾಗಿ ಶಿಫ್ಟ್ ಆಧಾರದ ಮೇಲೆ ನಿರ್ವಹಿಸಲಾಗುತ್ತಿದೆ.
ನರ್ಸಿಂಗ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ಡಾ. ವಿನಯ ದಾಸ್ತಿಕೊಪ್ಪ ವಿವರಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಎಚ್ಒ ಡಾ. ಎಸ್.ವಿ.ಮುನ್ಯಾಳ, ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅರವಿಂದ ಕಣಗಲಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ನೀರಾವರಿ ಇಲಾಖೆಯ ಎಂಜಿನಿಯರ್ ಸಿ.ಡಿ.ಪಾಟೀಲ ಸೇರಿದಂತೆ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss