ಶಿವಮೊಗ್ಗ: ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಡ್ರಗ್ಸ್ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪೊಲೀಸರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬುಧವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಬಳಕೆ ಗಂಭೀರ ಪ್ರಮಾಣದಲ್ಲಿ ನಡೆಯುತ್ತಿದೆ. ಅದನ್ನು ಸಂಪೂರ್ಣವಾಗಿ ಮಟ್ಟ ಹಾಕದಿದ್ದರೆ ನಮ್ಮ ಮನೆಯ ಒಳಗೆ ಬಂದು ಬಿಡುವ ಅಪಾಯವಿದೆ. ಜಿಲ್ಲೆಯಲ್ಲಿ ಪೊಲೀಸರು ಮಾದಕ ವಸ್ತುಗಳ ನಿಯಂತ್ರಣಕ್ಕೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪೊಲೀಸರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮಾದಕ ವಸ್ತು ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಕರ್ತವ್ಯ ಲೋಪ ಎಸಗುವ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅವರು ಪೊಲೀಸ್ ವರಿಷ್ಟಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಮಾತನಾಡಿ, ಮಾದಕ ವಸ್ತುಗಳ ಲಭ್ಯತೆ, ಮಾರಾಟ ಇತ್ಯಾದಿಗಳ ಕುರಿತು ಮಾಹಿತಿ ದೊರೆತರೆ ನೇರವಾಗಿ ಮೊಬೈಲ್ ಸಂಖ್ಯೆ 9480803301 ಮಾಹಿತಿ ನೀಡಬಹುದಾಗಿದ್ದು, ಅದನ್ನು ಗೌಪ್ಯವಾಗಿಡಲಾಗುವುದು ಎಂದರು.
ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಉಪಸ್ಥಿತರಿದ್ದರು.