Tuesday, June 28, 2022

Latest Posts

ಗೋಣಿಕೊಪ್ಪ| ಬೆಂಬಲ ಬೆಲೆಗೆ ಆಗ್ರಹಿಸಿ ರೈತರಿಂದ ವಾಹನ ಜಾಥಾ ಆರಂಭ

ಹೊಸದಿಗಂತ ವರದಿ, ಗೋಣಿಕೊಪ್ಪ:

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆ ವಿರೋಧಿಸಿ ಹಾಗೂ ಜಿಲ್ಲೆಯ ಪ್ರಮುಖ ಬೆಳೆಗಳಾದ ಕಾಫಿ, ಕರಿಮೆಣಸು ಮತ್ತು ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.

ಜಿಲ್ಲಾ ರೈತ ಸಂಘ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲಿ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಿಂದ ಶ್ರೀಮಂಗಲ, ಹುದಿಕೇರಿ, ಪೊನ್ನಂಪೇಟೆ ಮೂಲಕ ನಗರ ಪ್ರವೇಶಿಸಿದ ರೈತರ ವಾಹನ ಜಾಥಾಕ್ಕೆ ಬೆಳೆಗಾರರ ಒಕ್ಕೂಟ, ಕೊಡಗು ಹಿತರಕ್ಷಣಾ ವೇದಿಕೆ, ಕೊಡವ ಮಕ್ಕಳ ಕೂಟ, ಕೊಡವ ರೈಡರ್ಸ್ ಕ್ಲಬ್, ಕಾಂಗ್ರೆಸ್ ಪಕ್ಷ, ಯುಕೋ ಹಾಗೂ ಸಿಎನ್‍ಸಿ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ, ದೇಶದಲ್ಲಿ ಉತ್ಪಾದನೆಯಾಗುತ್ತಿರುವ ಕಾಫಿಯ ಒಟ್ಟು ಪ್ರಮಾಣದಲ್ಲಿ ಶೇಕಡಾ 70ರಷ್ಟು ಕಾಫಿಯನ್ನು ಕರ್ನಾಟಕ ರಾಜ್ಯ ನೀಡುತ್ತಿದ್ದು ಇದರಿಂದ 3,500 ಕೋಟಿ ವಿದೇಶಿ ವಿನಿಮಯ ಗಳಿಸುತ್ತಿದೆ. ಆದರೆ ರೈತರು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ನಿಗದಿಯಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ಅಧಿಕ ವಿದೇಶಿ ವಿನಿಮಯ ಗಳಿಸುವ ಕಾಫಿ ಹಾಗೂ ಕರಿಮೆಣಸು ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸುಜಯ್ ಬೋಪಯ್ಯ, ಸಂಚಾಲಕ ಪುಚ್ಚಿಮಾಡ ಸುಭಾಷ್, ಯುಕೊ ಸಂಘಟನೆ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಬೆಳಗಾರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹರೀಶ್ ಮಾದಪ್ಪ ಭಾಗವಹಿಸಿದ್ದರು.

ವೀರಾಜಪೇಟೆ ಪೊಲೀಸ್ ಉಪ ಅಧೀಕ್ಷಕ ಜಯಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಗೋಣಿಕೊಪ್ಪದಲ್ಲಿ ಪ್ರತಿಭಟನೆ ನಡೆಸಿದ ನಂತರ ರೈತ ಸಂಘದ ಕಾರ್ಯಕರ್ತರು ವಾಹನ ಜಾಥಾದ ಮೂಲಕ ಮೈಸೂರು ಕಡೆಗೆ ತೆರಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss