ಕಲಬುರಗಿ: ಮುಂಬರುವ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆ ಚರ್ಚಿಸಿ ಜಾರಿಗೆ ತರಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.
ನಗರದಲ್ಲಿ ಗುರುವಾರ ಇಲಾಖೆಯಿಂದ ಜಾನುವಾರಗಳ ಚಿಕಿತ್ಸೆಗಾಗಿ ನೂತನ ಆಂಬುಲೆನ್ಸ್ ಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದೆವು. ಅದರಂತೆ ನಡೆದುಕೊಳ್ಳುತ್ತೇವೆ ಎಂದರು.
ಬೆಂಗಳೂರಿನಲ್ಲಿ 10 ಅಂಬುಲೆನ್ಸ್ ಸೇರಿದಂತೆ ರಾಜ್ಯದಾದ್ಯಂತ 41 ಆಂಬುಲೆನ್ಸ್ ಖರೀದಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ ಕಲಬುರ್ಗಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ತೀರ್ಮಾನಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಬಸವರಾಜ ಮತ್ತಿಮೂಡ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.