ಮಡಿಕೇರಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ‘ಜಲ ಜೀವನ್ ಮಿಷನ್’ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತೀ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯವಾಗಿದ್ದು, ಆ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದರಲ್ಲದೆ, ಇದುವರೆಗೆ ಎಷ್ಟು ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ ಎಂದು ಮಾಹಿತಿ ಪಡೆದರು.
ಈ ಕುರಿತು ಮಾಹಿತಿ ನೀಡಿದ ಜಿ.ಪಂ.ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಅವರು ಜಿಲ್ಲೆಯಲ್ಲಿ 46,276 ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಅವರು, ಜಿಲ್ಲೆಯಲ್ಲಿ ಬಹುಮುಖ್ಯವಾಗಿ ಕುಡಿಯುವ ನೀರು, ವಿದ್ಯುತ್ ಮತ್ತು ರಸ್ತೆ ಸಂಪರ್ಕಕ್ಕೆ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಿಶೇಷ ಗಮನಹರಿಸಬೇಕಿದೆ ಎಂದು ಸಲಹೆ ಮಾಡಿದರು.
ಗ್ರಾಮ ಸಡಕ್ ಯೋಜನೆ :ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಸಿಮೆಂಟ್ ರಸ್ತೆಗಳನ್ನು ನಿರ್ಮಿಸಬೇಕು. ಆ ನಿಟ್ಟಿನಲ್ಲಿ ಈಗಾಗಲೇ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. ಹಾಗೆಯೇ ವೀರಾಜಪೇಟೆ ತಾಲೂಕಿನಲ್ಲಿ ನ. 12 ರಂದು ಶಾಸಕ ಕೆ.ಜಿ.ಬೋಪಯ್ಯ ಅವರ ಉಪಸ್ಥಿತಿಯಲ್ಲಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಸಂಸದರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಮಾತನಾಡಿ, ಮಡಿಕೇರಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಮಡಿಕೇರಿ ನಗರ ವ್ಯಾಪ್ತಿಯ ಪ್ರತೀ ವಾರ್ಡ್ಗೆ ಪೌರಾಯುಕ್ತರು ಭೇಟಿ ನೀಡಿ ಸಮಸ್ಯೆ ಆಲಿಸಬೇಕು. ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕೊಲ್ಲೀರ ಗೋಪಿ ಚಿನ್ನಪ್ಪ ಮತ್ತು ಸೋಮವಾರಪೇಟೆ ತಾ.ಪಂ.ಅಧ್ಯಕ್ಷೆ ಪುಷ್ಪ ಅವರು ವೂರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕಿನ ಹಲವು ರಸ್ತೆಗಳು ಹದಗೆಟ್ಟಿದ್ದು, ಸರಿಪಡಿಸುವ ಕಾರ್ಯವಾಗಬೇಕು ಎಂದು ಗಮನ ಸೆಳೆದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಕೋವಿಡ್ 19 ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ, ತಾ.ಪಂ.ಇಒಗಳಾದ ಲಕ್ಷ್ಮಿ (ಮಡಿಕೇರಿ), ಜಯಣ್ಣ (ಸೋಮವಾರಪೇಟೆ) ಮತ್ತು ಅಪ್ಪಣ್ಣ (ವೀರಾಜಪೇಟೆ) ಅವರು ತಮ್ಮ ಇಲಾಖೆಯ ವ್ಯಾಪ್ತಿಯ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿ.ಪಂ.ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ ಮತ್ತಿತರರು ಇದ್ದರು.