ಹೊಸ ದಿಗಂತ ವರದಿ, ದಾವಣಗೆರೆ:
ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.80ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕು. ಪಾರ್ಲಿಮೆಂಟ್ನಿಂದ ಪಂಚಾಯ್ತಿವರೆಗೆ ಬಿಜೆಪಿ ಆಡಳಿತ ಇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕರೆ ನೀಡಿದರು.
ನಗರದ ಜಿಎಂಐಟಿ ಕಾಲೇಜು ಆವರಣದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಘಟಕದಿಂದ ಆಯೋಜಿಸಲಾಗಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದೇವೆ. ಅದೇ ರೀತಿ ಅನೇಕ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರ ಪಡೆದಿದೆ. ಇದೀಗ ಗ್ರಾಮೀಣ ಭಾರತವನ್ನು ತಲುಪಬೇಕಿದೆ. ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಪ್ರಧಾನಿ ನರೇಂದ್ರ ಮೋದಿಯವರ ಕನಸು ಸಾಕಾರಗೊಳಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಭೈರತಿ ಮಾತನಾಡಿ, ಪ್ರಸ್ತುತ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಬೇಕಿದೆ. ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಾಗಿ ಈ ಯುದ್ಧ ಎದುರಿಸಬೇಕು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವಂತಹ ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಸಹಜವಾಗಿಯೇ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದ್ದು, ಗೊಂದಲ ಸರಿಪಡಿಸಿದರೆ ಗೆಲುವು ಸಾಧ್ಯ. ಏನೇ ಆದರೂ ಗ್ರಾಮ ಪಂಚಾಯಿತಿಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕಾಗಿದೆ ಎಂದರು.
ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕೃಷಿ ಸಮ್ಮಾನ್ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿಯವರು 6 ಸಾವಿರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ 4 ಸಾವಿರ ಸೇರಿದಂತೆ ಪ್ರತಿ ವರ್ಷ ರೈತರ ಖಾತೆಗೆ 10 ಸಾವಿರ ರೂ. ಪಾವತಿಸಲಾಗುತ್ತಿದೆ. ಜನಧನ್, ಆಯುಷ್ಮಾನ್ ಭಾರತ್, ಜಲಜೀವನ, ಅಟಲ್ ಪಿಂಚಣಿ, ಜನೌಷಧ ಕೇಂದ್ರ, ಆಹಾರ ಭದ್ರತಾ ಯೋಜನೆ, ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ಸೇರಿದಂತೆ ಅನೇಕ ಯೋಜನೆಗಳ ಮೂಲಕ ನರೇಂದ್ರ ಮೋದಿ ಸರ್ಕಾರ ದೇಶದ ಎಲ್ಲ ವರ್ಗದ ಜನರಿಗೆ ಉತ್ತಮ ಕೊಡುಗೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ ಆಧಾರದಲ್ಲಿ ಪ್ರಸ್ತುತ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಬೇಕು ಎಂದರು.
ದಾವಣಗೆರೆ ಉತ್ತರ ಶಾಸಕ ಎಸ್.ಎ.ರವೀಂದ್ರನಾಥ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವವರು ಮೊದಲು ಜನಾಭಿಪ್ರಾಯಕ್ಕೆ ಮನ್ನಣೆ ನೀಡಬೇಕು. ತಾವೇ ಸ್ಪರ್ಧಿಸುವ ಮನೋಭಾವನೆ ಕೈಬಿಟ್ಟು ಗೆಲ್ಲುವವರಿಗೆ ಅವಕಾಶ ಮಾಡಿಕೊಡಬೇಕು. ಹೀಗೆ ತ್ಯಾಗ ಮಾಡಿದ ವ್ಯಕ್ತಿಗೆ ಮುಂದೆ ಅವಕಾಶಗಳು ಸಿಕ್ಕೇ ಸಿಗುತ್ತವೆ ಎಂದು ಸೂಚ್ಯವಾಗಿ ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ್ ಹನಗವಾಡಿ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸ್ವರಾಜ್ ಯಾತ್ರೆಯ ಸಂಚಾಲಕ ತುಳಸಿ ಮುನಿರಾಜ ಗೌಡ, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಎಸ್.ವಿ.ರಾಮಚಂದ್ರ, ಪ್ರೊ.ಎನ್.ಲಿಂಗಣ್ಣ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಮಾಜಿ ಶಾಸಕರಾದ ಬಿ.ಪಿ.ಹರೀಶ್, ಬಸವರಾಜ ನಾಯ್ಕ, ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಮೇಯರ್ ಬಿ.ಜಿ.ಅಜಯ ಕುಮಾರ್, ಉಪ ಮೇಯರ್ ಸೌಮ್ಯ ನರೇಂದ್ರ, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಮಾಜಿ ಜಿಲ್ಲಾಧ್ಯಕ್ಷ ಅಣಬೇರು ಜೀವನಮೂರ್ತಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.