ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷ ದೊಳಗಿನ ಕಿಶೋರಾವಸ್ಥೆ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಬೇಕು ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ 2020ರ ಪ್ರಯುಕ್ತ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಆಟೋ ಮೂಲಕ ಜನ ಜಾಗೃತಿ ಜಾಥಾಕ್ಕೆ ಹಸಿರು ನೀಶಾನೆ ತೋರಿಸುವ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರಿಗೆ ದಂಡ ಹಾಗೂ ೨ ವರ್ಷದವರೆಗಿನ ಸೆರೆಮನೆ ವಾಸದ ಶಿಕ್ಷೆಗೆ ಒಳಪಡಿಸಬಹುದು. ತಪ್ಪಿತಸ್ಥ ಮಾಲೀಕರ ವಿರುದ್ಧ ಪೊಲೀಸ್ ಇಲಾಖೆಯಿಂದ ಎಫ್ಐಆರ್ ಸಹ ದಾಖಲಿಸಬಹುದು. ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ಮೊಕದ್ದಮೆ ದಾಖಲಿಸಬಹುದು ಎಂದು ಹೇಳಿದರು.
ಮಕ್ಕಳನ್ನು ಕೋವಿಡ್-19 ಸಾಂಕ್ರಮಿಕ ರೋಗದಿಂದ ರಕ್ಷಣೆ ಮಾಡಬೇಕು. ಈ ಕುರಿತು ಹಲವಾರು ಸೂಚನೆ ಹಾಗೂ ಜಾಗೃತಿಗಳನ್ನು ಮೂಡಿಸಲಾಗಿದೆ. ಆದರೂ ಕೆಲವೊಂದು ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ 10 ವರ್ಷದ ಒಳಗಿನ ಮಕ್ಕಳಿಗೆ ಕೊರೊನಾ ಹೆಚ್ಚು ಬಾಧಿಸುವ ಸಾಧ್ಯತೆ ಇದೆ. ಹಾಗಾಗಿ ಪೋಷಕರು ಹೆಚ್ಚು ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಉಪವಿಭಾಗಾಧಿಕಾರಿ ಪ್ರಸನ್ನ, ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿನುತಾ, ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಪ್ರಯುಕ್ತ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಅಂಗವಾಗಿ ಆಟೋ ಮೂಲಕ ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಕರಪತ್ರ ಬಿಡುಗಡೆಗೊಳಿಸಿದರು.