ಶಿವಮೊಗ್ಗ: ಪಕ್ಕದ ದಾವಣಗೆರೆ ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಚೆಕ್ಪೋಸ್ಟ್ ಬಿಗಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ಸೂಚನೆ ನೀಡಿದರು. ಹೊರ ಜಿಲ್ಲೆಯವರನ್ನು ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ತಿಳಿಸಿದರು.
ಮಾಸ್ಕ್ ಧರಿಸುವುದನ್ನು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಇದರ ಉಲ್ಲಂಘನೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200 ಹಾಗೂ ಇತರ ಕಡೆಗಳಲ್ಲಿ ರೂ. 100 ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳ ನಡುವೆ ಕನಿಷ್ಟ 1ಮೀಟರ್ ಅಂತರ ಪಾಲಿಸಬೇಕು. ಈ ಕುರಿತು ವ್ಯಾಪಕವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಸಾಮಾಜಿಕ ಅಂತರ ಪಾಲಿಸಲು ಕ್ರಮ ಕೈಗೊಳ್ಳದಿರುವ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದರು.
ಆಹಾರ ಪದಾರ್ಥಗಳನ್ನು ಬೀದಿ ಬದಿ ಮಾರಾಟ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ಇಲ್ಲ.
ಕೈಗಾರಿಕಾ ಸಂಸ್ಥೆಗಳಿಗೆ ಎರಡು ದಿನಗಳಿಗೊಮ್ಮೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ, ಈ ಕುರಿತು ಸರ್ಕಾರ ಬಿಡುಗಡೆಗೊಳಿಸಿರುವ ಮಾರ್ಗಸೂಚಿಯನ್ನು ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ವರದಿಯನ್ನು ಸಲ್ಲಿಸಬೇಕು. ಇದಕ್ಕಾಗಿ ತಾಲೂಕು ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಕ ಮಾಡಿ ಎಂದು ತಿಳಿಸಿದರು.
ಎಸ್ಪಿ ಶಾಂತರಾಜು, ಸಿಇಒ ವೈಶಾಲಿ ಉಪಸ್ಥಿತರಿದ್ದರು.