Thursday, August 11, 2022

Latest Posts

ಜಂಬೂರಿನಲ್ಲಿ ಜಾತ್ಯಾತೀತ ಜನತಾದಳದ ಪ್ರಮುಖರು, ಕಾರ್ಯಕರ್ತರ ಪ್ರತಿಭಟನೆ: ಪ್ರಮುಖರು ಪೊಲೀಸ್ ವಶ

ಮಡಿಕೇರಿ: ಮಳೆಹಾನಿ ಸಂತ್ರಸ್ತರ ನೂತನ ಮನೆಗಳ ಹಸ್ತಾಂತರ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸದಿರುವುದನ್ನು ವಿರೋಧಿಸಿ ಜಾತ್ಯಾತೀತ ಜನತಾದಳದ ಪ್ರಮುಖರು ಹಾಗೂ ಕಾರ್ಯಕರ್ತರು ಜಂಬೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ವಸತಿ ಸಚಿವ ವಿ.ಸೋಮಣ್ಣ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರ ಉಪಸ್ಥಿತಿಯಲ್ಲಿ ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭ ಸ್ಥಳಕ್ಕೆ ಆಗಮಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮತ್ತು ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕುಮಾರಸ್ವಾಮಿ ಅವರ ಕಡೆಗಣನೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.
ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಗಣೇಶ್ ಸೇರಿದಂತೆ ೭೦ ಮಂದಿಯನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
೨೦೧೮ರಲ್ಲಿ ಅತಿವೃಷ್ಟಿ ಹಾನಿಯಿಂದ ಸಾವಿರಾರು ಕುಟುಂಬಗಳು ಮನೆಗಳನ್ನು ಕಳೆದುಕೊಂಡಾಗ ಸಕಾಲದಲ್ಲಿ ನೆರವಿಗೆ ಬಂದವರು ಕುಮಾರಸ್ವಾಮಿ. ಆದರೆ ಇಂದು ವಸತಿ ಯೋಜನೆ ಪೂರ್ಣಗೊಂಡು ಹಸ್ತಾಂತರಿಸುವ ಸಂದರ್ಭ ಮಾಜಿ ಮುಖ್ಯಮಂತ್ರಿಗಳನ್ನೇ ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಗಣೇಶ್ ಅಸಮಾಧಾನ ವ್ಯಕ್ತಪಡಿಸಿದರು. ಆಡಳಿತ ನಡೆಸುತ್ತಿರುವವರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಉಪಾಧ್ಯಕ್ಷ ಮನ್ಸೂರ್ ಆಲಿ, ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಖಜಾಂಚಿ ಡೆನ್ನಿ ಬರೋಸ್, ಕಾರ್ಯದರ್ಶಿ ಎನ್.ಸಿ.ಸುನಿಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಬೆಟ್ಟಗೇರಿ, ಗಣೇಶ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಖಲೀಲ್ ಬಾದ್ ಶಾ, ಮಡಿಕೇರಿ ನಗರ ಎಸ್.ಸಿ. ಘಟಕದ ಅಧ್ಯಕ್ಷ ಹೆಚ್.ಎ.ರವಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಜನಪ್ರತಿನಿಧಿಗಳಿಂದಲೂ ಪ್ರತಿಭಟನೆ: ಜಂಬೂರಿನಲ್ಲಿ ಸಂತ್ರಸ್ತರಿಗೆ ಮನೆ ಹಸ್ತಾಂತರ ಸಂದರ್ಭ ತಮ್ಮನ್ನೂ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಸ್ಥಳೀಯ ಜನಪ್ರತಿನಿಧಿಗಳೂ ಪ್ರತಿಭಟನೆ ನಡೆಸಿದರು.
ಜಿಲ್ಲಾ ಪಂಚಾಯತ್ ಸದಸ್ಯೆ ಕುಮುದಾ ಧರ್ಮಪ್ಪ, ಸೋಮವಾರಪೇಟೆ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಅವರುಗಳು ತಮ್ಮ ಆಕ್ರೋಶ ಹೊರಗೆಡವಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು, ಉದ್ದೇಶಪೂರ್ವಕವಾಗಿ ಯಾರನ್ನೂ ಕಡೆಗಣಿಸಿಲ್ಲ. ಕೊರೋನಾ ಲಾಕ್ಡೌನ್ ನಡುವೆಯೂ ಮಳೆಗಾಲಕ್ಕೆ ಮುನ್ನವೇ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಬೇಕೆಂಬ ಅಭಿಲಾಷೆಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರೊಟೋಕಾಲ್ನಂತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮ ನಡೆಸಲು ಸಹಕರಿಸಿ ಎಂದು ಮನವಿ ಮಾಡಿದರು.
ಸಚಿವರ ಮಾತಿಗೆ ಮನ್ನಣೆ ನೀಡಿದ ಜನಪ್ರತಿನಿಧಿಗಳು ಬಳಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss