ಹೊಸ ದಿಗಂತ ವರದಿ, ಬೀದರ:
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಎದುರು ಕಾಂಗ್ರೆಸ್ ಪಕ್ಷದ ನಾಯಕರು ಜನಮನ್ನಣೆ ಕಳೆದುಕೊಂಡಿದ್ದಾರೆoದು ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.
ಅವರು ಭಾರತೀಯ ಜನತಾ ಪಾರ್ಟಿ ಬೀದರ ಜಿಲ್ಲಾ ಘಟಕದಿಂದ ಜನವರಿ 11 ರಂದು ಆಯೋಜಿಸಿದ್ದ ಗ್ರಾ.ಪಂ.ಚುನಾವಣೆಯಲ್ಲಿ ಆಯ್ಕೆಯಾಗಿರುವ ಬಿಜೆಪಿ ಬೆಂಬಲಿತ ನೂತನ ಸದಸ್ಯರಿಗೆ ಸನ್ಮಾನ ಹಾಗೂ ಗ್ರಾಮ ಜನಸೇವಕ ಸಮಾವೇಶದಲ್ಲಿ ಭಾಗವಹಿಸಲು ಬೀದರ ಜಿಲ್ಲೆಗೆ ಆಗಮಿಸಿದ್ದ ಸಂದರ್ಭ ಸುದ್ದಿಗೋಷ್ಠಯಲ್ಲಿ ಮಾತನಾಡಿದರು.
ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ ನೋಡಿಕೊಂಡು ಕಾಂಗ್ರೆಸ್ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಎಲ್ಲೆಡೆ ಜನಮನ್ನಣೆ ಸಿಗುತ್ತದೆ. ಗ್ರಾಮ ಪಂಚಾಯತ, ವಿಧಾನಸಭೆ, ಲೋಕಸಭೆ ಚುನಾವಣೆಗಳು ಹಾಗೂ ಉಪ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಮೂರನೇ ಅಥವಾ ನಾಲ್ಕನೇ ಸ್ಥಾನ ಪಡೆಯುತ್ತಿದೆ. ಒಟ್ಟಾರೆ ಹೇಳುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರ ಎದುರು ಕಾಂಗ್ರೆಸ್ ನಾಯಕರು ಜನಮನ್ನಣೆ ಕಳೆದುಕೊಂಡಿದ್ದಾರೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕ ರಾಜ್ಯದಲ್ಲಿ ವಿಧಾನಸಭೆಯ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಯಿತು. ಮತ್ತೇ ಮೂರು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿದೆ ಎಂದರು.
ಜನವರಿ 17 ರಂದು ಗ್ರಾಮ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭ ಬೆಳಗಾವಿಯಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಈ ಸಮಾವೇಶದಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ ಎಂದರು.
ಸಚಿವ ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಗಳು ಪರಮಾಧಿಕಾರವಿದೆ. ಬಿಜೆಪಿ ಹೈಕಮಾಂಡನಿಂದ ಹಸಿರು ನಿಶಾನೆ ಸಿಕ್ಕಿದೆ. ಎಷ್ಟು ಮಂದಿಗೆ ಸೇರಿಸಿಕೊಳ್ಳುತ್ತಾರೆ ಎಂಬ ಮಾಹಿತಿ ಇಲ್ಲ ಎಂದರು. ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮೂರುವರೆ ವರ್ಷ ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯನವರಿಗೆ ಎನು ಕೆಲಸವಿಲ್ಲದ ಕಾರಣ ಅನಗತ್ಯ ವಿಷಯಗಳ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಬೇರೆ ಪಕ್ಷದ ಬಗ್ಗೆ ಮಾತನಾಡುವ ಸಿದ್ಧರಾಮಯ್ಯನವರು ತಮ್ಮ ಹಾಗೂ ಡಿ.ಕೆ. ಶಿವಕುಮಾರ ಮಧ್ಯೆ ಬಿರುಕು ಸರಿ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ, ಸಚಿರಾದ ಶ್ರೀಮತಿ ಶಶಿಕಲಾ ಜೋಲ್ಲೆ, ಸಂಸದ ಭಗವಂತ ಖೂಬಾ, ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ಹಾಗೂ ಮೂಲ ಸೌಲಭ್ಯ ನಿಗಮ ಮಂಡಳಿ ಅಧ್ಯಕ್ಷರಾದ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ರಾಜ್ಯ ನಾಯಕ ಸಂದೀಪ, ಜಿಲ್ಲಾ ಅಧ್ಯಕ್ಷರಾದ ಶಿವಾನಂದ ಮಂಠಾಳಕರ್, ಮುಖಂಡರಾದ ಈಶ್ವರಸಿಂಗ ಠಾಕೂರ ಹಾಗೂ ಮುಂತಾದವರು ಇದ್ದರು.