ಹೊಸ ದಿಗಂತ ವರದಿ, ಚಿತ್ರದುರ್ಗ:
ವೈದ್ಯಕೀಯ ಕಾಲೇಜುಗಳು ಸೇರಿದಂತೆ ನರ್ಸಿಂಗ್ ಮತ್ತಿತರ ಪದವಿ ಕಾಲೇಜುಗಳ ಜೊತೆಯಲ್ಲಿ ವಿಶ್ವ ವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳನ್ನು ಡಿಸೆಂಬರ್ 1 ರಿಂದ ಆರಂಭಿಸಲಾಗುವುದು ಎಂದು ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸ್ಥಳ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಂಡಿದೆ ಎಂದರು.
ಕಾಲೇಜು ಆರಂಭಕ್ಕೂ ಮುನ್ನ ಮಾರ್ಜಸೂಚಿ ಬಿಡುಗಡೆ ಮಾಡಲಾಗುತ್ತದೆ. ಅಲ್ಲದೇ ಕೋವಿಡ್ ಸೋಂಕು ಹರಡುವಿಕೆ ತಡೆಯುವುದು ಸೇರಿದಂತೆ ಹಲವು ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ನಾರಾಯಣಸ್ವಾಮಿ. ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಿರಿಯೂರು ಶಾಸಕರಾದ ಪೂರ್ಣಿಮಾ ಶ್ರೀನಿವಾಸ್, ಜಿ.ಪಂ. ಅಧ್ಯಕ್ಷೆ ಶಶಿಕಲಾ ಸುರೇಶ್ಬಾಬು, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷ ಮುರುಳಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿ.ಪಂ. ಸಿಇಒ ಯೋಗೇಶ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.