ಹಾವೇರಿ: ಕೋವಿಡ್ ಲಾಕ್ಡೌನ್ ಸಡಿಲಿಕೆ ನಂತರ ತ್ರೈಮಾಸಿಕ ಯೋಜನೆಗಳನ್ನು ರೂಪಿಸಿಕೊಂಡು ಸಾರಿಗೆ ನಷ್ಟವನ್ನು ಸರಿದೂಗಿಸಿ ಲಾಭ ತರುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಪ್ರತಿ ಮೂರು ತಿಂಗಳಿಗೊಮ್ಮೆ ಕ್ರಿಯಾ ಯೋಜನೆಗಳನ್ನು ಸಿದ್ದಮಾಡಿಕೊಳ್ಳಬೇಕು. ಉತ್ತಮ ಸೇವೆ ಜೊತೆಗೆ ಸಾರಿಗೆ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಮಾಣಿಕವಾಗಿ ಶ್ರಮಿಸುವ ನಿಟ್ಟಿನಲ್ಲಿ ಕಾರ್ಯಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಯಾವ ಯಾವ ಮಾರ್ಗದಲ್ಲಿ ಸಾರಿಗೆ ಬಸ್ಗಳು ಓಡಾಡುತ್ತಿವೆ, ಈ ಪೈಕಿ ಯಾವ ರೂಟ್ಗಳು ಲಾಭದಾಯಕ, ಯಾವ ಮಾರ್ಗಗಳಲ್ಲಿ ನಷ್ಟ ಉಂಟಾಗುತ್ತಿದೆ, ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್ಗಳು ಓಡಾಡುತ್ತವೆ ಎಂಬುದನ್ನು ವಿಭಾಗವಾರು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಮಾರ್ಗಗಳಲ್ಲಿ ಲಾಭ ತರುವ ನಿಟ್ಟಿನಲ್ಲಿ ಯೋಜನೆಯನ್ನು ತಯಾರಿಸಿ. ಪ್ರತಿ ಮೂರು ತಿಂಗಳಿಗೊಮ್ಮೆ ಪ್ಲಾನ್ಮಾಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮವಹಿಸಿ ಎಂದರು.
ನಷ್ಟದಲ್ಲಿರುವ ಮಾರ್ಗಗಳು ಯಾವ ಕಾರಣಕ್ಕೆ ಆದಾಯ ಬರುವುದಿಲ್ಲ ಎಂಬುದನ್ನು ಪತ್ತೆಮಾಡಿ. ಆ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಲಾಭ ತರುವ ಮಾರ್ಗಗಳಾಗಿ ಪರಿವರ್ತಿಸಬೇಕು. ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಬೇಕು, ಸವಕಳಿ ವೆಚ್ಚವನ್ನು ಕಡಿಮೆ ಮಾಡಬೇಕು, ಆದಾಯ ಸೋರಿಕೆ ತಡೆಯಬೇಕು. ರಸ್ತೆ ಸಾರಿಗೆ ಸಂಸ್ಥೆಗಳಿಗೆ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಸ್ವಚ್ಛತೆ, ಸಮಯಕ್ಕೆ ಸರಿಯಾಗಿ ವಾಹನ ಓಡಿಸುವ ಕೆಲಸವನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಬಿ.ಪಾಟೀಲ, ಜಿ.ಪಂ ಸದಸ್ಯ ಸಿದ್ಧರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿ.ಪಂ ಸಿಇಓ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗ ಹಾಗೂ ಹುಬ್ಬಳ್ಳಿ ವಿಭಾಗದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.