Sunday, June 26, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಸಚಿವ ಕೋಟ

ಮಂಗಳೂರು: ಕೊರೋನಾ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜುಗಳ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಸೋಮವಾರ ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಹಾಗೂ ಸಾಮರ್ಥ್ಯವನ್ನು ಪರಿಶೀಲಿಸಿ, ಮಾತನಾಡುತ್ತಾ, ಬಿಪಿಎಲ್, ಎಪಿಎಲ್ ಕುಟುಂಬಗಳು, ವಲಸೆ ಕಾರ್ಮಿಕರು, ರೇಶನ್ ಕಾರ್ಡ್ ಇಲ್ಲದವರು ಸೇರಿದಂತೆ ಎಲ್ಲರಿಗೂ ಜಿಲ್ಲೆಯ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ರೋಗಿಗಳು ಆಸ್ಪತ್ರೆಯಲ್ಲಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.
ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ಶಂಕಿತರಿಗೆ ಹಾಗೂ ದೃಢ ಪಟ್ಟವರಿಗೆ ಉಚಿತ ಚಿಕಿತ್ಸೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾದಿಂದ ಗುಣಮುಖರಾದವರ ಸಂಖ್ಯೆ ಅಧಿಕವಾಗಿದೆ. ಪ್ರತೀ ದಿನ ಬಿಡುಗಡೆಯಾಗುವವರ ಸಂಖ್ಯೆಯೂ ಹೆಚ್ಚಿದೆ. ಸಾರ್ವಜನಿಕರು ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಜನತೆಯ ಆರೋಗ್ಯ ರಕ್ಷಣೆಗೆ ಸರಕಾರ ಕಟಿ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.
ಕೇಸು ದಾಖಲಿಸಲು ಸೂಚನೆ
ಜಿಲ್ಲೆಯ ಕೆಲವು ಆಸ್ಪತ್ರೆಗಳಲ್ಲಿ ಸರಕಾರ ನಿಗದಿ ಪಡಿಸಿದ ಚಿಕಿತ್ಸಾ ದರವನ್ನು ಮೀರಿ ಭಾರೀ ಮೊತ್ತದ ಬಿಲ್ಲನ್ನು ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದೆ. ಅಂತಹ ಆಸ್ಪತ್ರೆಗಳ ವಿರುದ್ಧ ಕೇಸು ದಾಖಲಿಸಿ ಎಂದು ಲೋಕಸಭಾ ಸದಸ್ಯ ನಳಿನ್‌ಕುಮಾರ್ ಕಟೀಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಚಿಕಿತ್ಸೆಗೆ ಸರಕಾರ ನಿಗದಿ ಪಡಿಸಿದ ದರಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ರೋಗಿಯ ತುರ್ತು ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಇದ್ದಲ್ಲಿ, ಕೋವಿಡ್ ವರದಿಗೆ ಕಾಯದೆ, ಶಸ್ತ್ರಚಿಕಿತ್ಸೆ ಮಾಡುವಂತೆ ಸಂಸತ್ ಸದಸ್ಯರು ಸೂಚಿಸಿದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸರಕಾರಿ ದರದಲ್ಲಿ ದೊರಕುವ ಕೋವಿಡ್ ಚಿಕಿತ್ಸೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ರೋಗಿಗಳ ಅಹವಾಲಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ತಿಳಿಸ ಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್, ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರತ್ನಾಕರ್, ವೆನ್ಲಾಕ್ ಡಿಎಂಒ ಡಾ.ಸದಾಶಿವ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss